ಚಾಮರಾಜನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಎಸ್ಪಿ ಎಂ.ಮುತ್ತುರಾಜು ಅವರಿಗೆ ಜಿಲ್ಲಾ ವಕೀಲರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ ರಾಮಸಮುದ್ರ, ಉಪಾಧ್ಯಕ್ಷ ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಶಿವರಾಮು ಇದ್ದರು.
- ನಿರಂತರವಾಗಿ ಬರುತ್ತಿರುವ ಹುಸಿ ಬಾಂಬ್ ಬೆದರಿಕೆ
- ಜಿಲ್ಲಾ ವಕೀಲರ ಸಂಘದಿಂದ ಡಿಸಿ, ಎಸ್ಪಿಗೆ ಮನವಿ ಸಲ್ಲಿಕೆ
ಚಾಮರಾಜನಗರ: ಜಿಲ್ಲಾ ನ್ಯಾಯಾಲಯಕ್ಕೆ ನಿರಂತರವಾಗಿ ಹುಸಿ ಬಾಂಬ್ ಬೆದರಿಕೆಯ ಸಂದೇಶಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ವಿಶೇಷ ರಕ್ಷಣಾ ಸಿಬ್ಬಂದಿಯನ್ನು ನೇಮಕ ಮಾಡಬೇಕೆಂದು ಜಿಲ್ಲಾ ವಕೀಲರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪೊಲೀಸ್ ಇಲಾಖೆ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜು ಅವರಿಗೆ ಮನವಿ ಸಲ್ಲಿಸಿದ ವಕೀಲರು, ಜಿಲ್ಲಾ ನ್ಯಾಯಾಲಯಕ್ಕೆ ಪದೇ ಪದೇ ಹುಸಿ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿವೆ. ಈ ಬಗ್ಗೆ ಪೊಲೀಸರಿಗೆ ದೂರು ಸಲ್ಲಿಸಲಾಗಿದ್ದು, ತನಿಖೆ ನಡೆಯುತ್ತಿದ್ದರೂ ಮೇಲಿಂದ ಮೇಲೆ ಹುಸಿ ಬಾಂಬ್ ಬೆದರಿಕೆ ಹಾಕುತ್ತಿರುವುದು ಜಿಲ್ಲೆಯ ಜನತೆಯಲ್ಲಿ ಭಯವನ್ನುಂಟು ಮಾಡಿದೆ. ನ್ಯಾಯಾಲಯಕ್ಕೆ ಬರುವ ಜನರು ಕಕ್ಷಿದಾರರು ನ್ಯಾಯಾಲಯಕ್ಕೇ ಈ ರೀತಿಯಾದರೆ ಸಾಮಾನ್ಯ ಜನರ ಗತಿಯೇನು ಎಂದು ಪ್ರಶ್ನಿಸುವಂತಾಗಿದೆ ಎಂದರು.
ನ್ಯಾಯಾಲಯದಲ್ಲಿ ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಭಯದ ವಾತಾವರಣದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನ್ಯಾಯಾಲಯಗಳ ಬಗ್ಗೆ ಹೆಚ್ಚಿನ ಒತ್ತನ್ನು ನೀಡಿ ನ್ಯಾಯಾಲಯಗಳಿಗೆ ರಕ್ಷಣೆ ನೀಡಬೇಕು. ವಿಶೇಷ ರಕ್ಷಣಾ ಸಿಬ್ಬಂದಿಯನ್ನು ನೇಮಿಸಬೇಕು. ಕೋರ್ಟ್ ಆವರಣದಲ್ಲಿ ಸೂಕ್ತ ಬಂದೋಬಸ್ತ್ ಏರ್ಪಡಿಸಬೇಕೆಂದು ಒತ್ತಾಯಿಸಿದರು. ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ ರಾಮಸಮುದ್ರ, ಉಪಾಧ್ಯಕ್ಷ ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಶಿವರಾಮು ಮತ್ತು ಇತರರು ಇದ್ದರು.
ಜಿಲ್ಲಾ ನ್ಯಾಯಾಲಯಕ್ಕೆ ಗುರುವಾರ ಐದನೇ ಬಾರಿಗೆ ಹುಸಿ ಬಾಂಬ್ ಬೆದರಿಕೆಯ ಸಂದೇಶ ಮತ್ತೆ ಬಂದಿತು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದರು. ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ಮಾಡಲಾಯಿತು. ಬಳಿಕ ಹುಸಿ ಬೆದರಿಕೆ ಎಂದು ಗೊತ್ತಾಯಿತು. ಈ ವೇಳೆ ಕೋರ್ಟ್ ಕಲಾಪದ ಸಮಯ ವ್ಯರ್ಥವಾಯಿತು.
ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸುತ್ತಿರುವ ಪ್ರಕರಣದ ಮೇಲೆ ಎ್ಐಆರ್ ದಾಖಲಿಸಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ.
ಸ್ನೇಹರಾಜ್, ಡಿವೈಎಸ್ಪಿ, ಚಾಮರಾಜನಗರ