ಹನೂರು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ರಾಚಯ್ಯ, ಉಮೇಶ್, ಸುನಂದಾ, ರಮೇಶ್ ಇತರರಿದ್ದರು.
ಹನೂರು: ಮಹಿಳೆಯರು ಬಾಲ್ಯವಿವಾಹದ ಬಗ್ಗೆ ಜಾಗೃತಿ ಮೂಡಿಸುವುದರ ಜತೆಗೆ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಿ ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಾಳ್ಯ ರಾಚಯ್ಯ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳೆಯರನ್ನು ಸನ್ಮಾನಿಸಿ ಮಾತನಾಡಿದರು.
ಸಮಾಜದಲ್ಲಿ ಹಿಂದೆ ಹೆಣ್ಣು ಮಕ್ಕಳನ್ನು ಅಡುಗೆ ಕೋಣೆಗೆ ಸೀಮಿತಗೊಳಿಸಲಾಗಿತ್ತು. ಆದರೀಗ ಕಾಲ ಬದಲಾದಂತೆ ಹೆಣ್ಣು ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವುದರ ಮೂಲಕ ಸಬಲರಾಗಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಒತ್ತನ್ನು ನೀಡಿದ್ದು, ಹಲವು ಸವಲತ್ತುಗಳನ್ನು ಒದಗಿಸುತ್ತಿದೆ. ಮಹಿಳೆಯರಿಗೆ ಸ್ಥಾನಮಾನವನ್ನೂ ನೀಡಿದೆ. ಈ ದೆಸೆಯಲ್ಲಿ ಮಹಿಳೆಯರು ಅಭಿವೃದ್ಧಿ ಹೊಂದುತ್ತಿದ್ದಾರೆ. ಆದರೆ ಹನೂರು ತಾಲೂಕಿನ ರಾಮಾಪುರದ ಭಾಗದಲ್ಲಿ ಇಂದಿಗೂ ಸಹ ಬಾಲ್ಯವಿವಾಹ ನಡೆಯುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಇಂತಹ ಸಾಮಾಜಿಕ ಪಿಡುಗಿಗೆ ಕಡಿವಾಣ ಹಾಕಬೇಕಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕಾದದು ಅಗತ್ಯವಾಗಿದೆ ಎಂದು ತಿಳಿಸಿದರು.
ಇದೇ ವೇಳೆ ತಾಪಂ ಇಒ ಉಮೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಪಂ ವ್ಯವಸ್ಥಾಪಕ ರಮೇಶ್, ಎನ್‌ಆರ್‌ಎಲ್‌ಎಂ ವಲಯ ಮೇಲ್ವಿಚಾರಕಿ ಕುಮಾರಿ, ಮಹಿಳಾ ಒಕ್ಕೂಟದ ತಾಲೂಕು ಅಧ್ಯಕ್ಷೆ ಸುನಂದಾ, ಕಚೇರಿ ನೌಕರರಾದ ಲಿಂಗರಾಜು, ಪೂಜಾ, ಶೋಭಾ, ಸುರೇಶ್ ಹಾಗೂ ಇನ್ನಿತರರು ಇದ್ದರು.