ಗುಂಡ್ಲುಪೇಟೆ ಪಟ್ಟಣದ ಪುರಸಭೆಯ ಬಯಲು ಕಲಾ ಮಂದಿರದಲ್ಲಿ ಆಯೋಜಿಸಿದ್ದ ಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪುಟ್ಟರಂಗಶೆಟ್ಟಿ, ಗಣೇಶ್ ಪ್ರಸಾದ್, ನಿರಂಜನಕುಮಾರ್, ಡಾ.ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಮಹದೇವ ಸ್ವಾಮೀಜಿ ಇದ್ದರು.
ಗುಂಡ್ಲುಪೇಟೆ: ಭಗೀರಥ ಮಹರ್ಷಿಗಳ ಅವಿರತ ಪ್ರಯತ್ನದಿಂದ ಭೂಮಿಗೆ ಗಂಗೆಯನ್ನು ತರಲು ಸಾಧ್ಯವಾಗಿದ್ದರಿಂದ ಪ್ರತಿ ವರ್ಷ ಅವರ ಜಯಂತಿ ಆಚರಿಸಲಾಗುತ್ತದೆ ಎಂದು ಪಶುಸಂಗೋಪನೆ, ರೇಷ್ಮೆ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ಪಟ್ಟಣದ ಪುರಸಭೆಯ ಬಯಲು ಕಲಾ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪೌರಾಣಿಕ ಹಿನ್ನೆಲೆಯಿರುವ ಭಗೀರಥ ಮಹರ್ಷಿಗಳು ತಮ್ಮ ವಂಶಸ್ಥರಿಗೆ ಮುಕ್ತಿ ನೀಡಲು ಕಠಿಣ ತಪಸ್ಸು ಮಾಡಿ ಗಂಗೆಯನ್ನು ಭೂಮಿಗೆ ಕರೆತರುವ ಸಾಧನೆ ಮಾಡಿದ್ದರು ಎಂದು ಹೇಳಿದರು.
ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿ, ಪ್ರತಿ ಜೀವಿಗೂ ನೀರು ಅತ್ಯಂತ ಪ್ರಮುಖ. ಜನಾಂಗದವರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾಗಿದ್ದು ಮುಂದಿನ ದಿನಗಳಲ್ಲೂ ಉಪ್ಪಾರ ಸಮುದಾಯ ಭವನ ನಿರ್ಮಾಣಕ್ಕೆ ಮತ್ತಷ್ಟು ನೆರವು ನೀಡಲಾಗುವುದು. ಕಾಂಗ್ರೆಸ್ ಸರ್ಕಾರ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡುವ ಮೂಲಕ ನೆರವಾಗುತ್ತಿದೆ ಎಂದು ಹೇಳಿದರು.
ತಾಲೂಕು ಮಳೆ ಕೊರತೆಯಿಂದ ಬರಪೀಡಿತವಾಗಿದೆ. ಹೆಚ್ಚಿನ ಬೆಳೆ ನಾಶವಾಗಿದ್ದು ಬೆಳೆವಿಮೆ ಪಡೆದಿರುವ 7 ಸಾವಿರಕ್ಕೂ ಹೆಚ್ಚಿನ ರೈತರಿಗೆ ಪರಿಹಾರ ದೊರಕಲಿದೆ ಎಂದು ಹೇಳಿದರು.
ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಮಾತನಾಡಿ, ನಮ್ಮ ಅವಧಿಯಲ್ಲಿ ಉಪ್ಪಾರ ಜನಾಂಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾಗಿತ್ತು. ಜನಾಂಗದವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಮುಂದೆ ಬರಬೇಕು ಎಂದು ಹೇಳಿದರು.
ಹೊಸದುರ್ಗ ಭಗೀರಥ ಪೀಠದ ಡಾ. ಪುರುಷೋತ್ತಮಾನಂದಪುರಿ ಸ್ವಾಮೀಜಿ, ಅಯ್ಯನ ಸರಗೂರು ಮಠದ ಶ್ರೀ ಮಹದೇವ ಸ್ವಾಮೀಜಿ ಆಶೀರ್ವಚನ ನೀಡಿದರು. ತಹಸೀಲ್ದಾರ್ ಎಂ.ಎಸ್.ತನ್ಮಯಿ, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಲಕ್ಷ್ಮಣ್ ಉಪ್ಪಾರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ಎನ್.ವಿಜಯ್ ಕುಮಾರ್, ಉಪ್ಪಾರ ಯುವಕರ ಸಂಘದ ರಾಜ್ಯ ಉಪಾಧ್ಯಕ್ಷ ರಾಮಚಂದ್ರ, ಮುಖಂಡ ಬಿ.ಜಿ.ಶಿವಕುಮಾರ್, ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಶಿವಶಂಕರ್, ಪುರಸಭೆ ಮಾಜಿ ಅಧ್ಯಕ್ಷ ಪಿ.ಗಿರೀಶ್ ಇದ್ದರು. ಪ್ರತಿಭಾವಂತ ವಿದ್ಯಾರ್ಥಿಗಳನು ಸನ್ಮಾನಿಸಲಾಯಿತು.