ಬೂದುಬಾಳು ಶ್ರೀಗುಡಿಹಟ್ಟಿ ವೆಂಕಟರಮಣಸ್ವಾಮಿ ದೇಗುಲದಲ್ಲಿ ಭಕ್ತರು ಸರತಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರು.
- ಬೂದುಬಾಳು ಗ್ರಾಮದಲ್ಲಿ ಕಡೇ ಶ್ರಾವಣ ಶನಿವಾರ ಸಂಭ್ರಮ
ಹನೂರು: ಈ ಭಾಗದಲ್ಲಿ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಬೂದುಬಾಳು ಗ್ರಾಮದ ಶ್ರೀಗುಡಿಹಟ್ಟಿ ವೆಂಕಟರಮಣಸ್ವಾಮಿ ದೇಗುಲದಲ್ಲಿ ಕಡೇ ಶ್ರಾವಣ ಶನಿವಾರದ ಅಂಗವಾಗಿ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಸಾವಿರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು.
ದೇಗುಲವನ್ನು ತಳಿರು ತೋರಣ ಹಾಗೂ ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿತ್ತು. ಬೆಳಗ್ಗೆ ಸ್ವಾಮಿಗೆ ವಿವಿಧ ಅಭಿಷೇಕ, ಸಹಸ್ರನಾಮ ಹಾಗೂ ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಬೆಳಗಿಸಲಾಯಿತು. ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು. ಆಗಮಿಸಿದ ಭಕ್ತರು ಧೂಪ ಹಾಕಿ ಸರತಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರು. ಹಣ್ಣು ಕಾಯಿ ನೀಡಿ ಪೂಜೆ ಸಲ್ಲಿಸಿದರು. ದೇಗುಲದ ಮುಂಭಾಗ ಗಂಧದಕಡ್ಡಿ, ಕರ್ಪೂರ ಹಚ್ಚಿ ಕೈ ಮುಗಿದು ಸ್ವಾಮಿಯನ್ನು ನೆನೆದರು. ಕೆಲ ಭಕ್ತರು ಮುಡಿ ಸೇವೆಯನ್ನು ನೀಡಿ ಹರಕೆ ತೀರಿಸಿದರು.
ಮಂಡ್ಯ, ಚಾ.ನಗರ ಸೇರಿದಂತೆ ತಾಲೂಕಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ದೇಗುಲದ ವತಿಯಿಂದ ಹಾಗೂ ದಾನಿಗಳಿಂದ ಅನ್ನ ಸಂತರ್ಪಣೆ ನಡೆಯಿತು. ಕಡೇ ಶ್ರಾವಣ ಹಿನ್ನೆಲೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿದ್ದರು.