ಹನೂರಿನ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ಧನುರ್ಮಾಸ ಪೂಜೆ ಆರಂಭದ ಹಿನ್ನೆಲೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು.
ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ಮಂಗಳವಾರ ಧನುರ್ಮಾಸ ಆರಂಭದ ಹಿನ್ನೆಲೆಯಲ್ಲಿ ದೇವಿಗೆ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಆಗಮಿಸಿದ ಭಕ್ತರು ದೇವರ ದರ್ಶನ ಪಡೆದರು.
ಧನುರ್ಮಾಸ ಆರಂಭದ ಹಿನ್ನೆಲೆಯಲ್ಲಿ ದೇಗುಲವನ್ನು ತಳಿರು ತೋರಣದಿಂದ ಸಿಂಗಾರ ಮಾಡಲಾಗಿತ್ತು. ದೇವಿಗೆ ಬೆಳಗ್ಗೆ 5ರಲ್ಲಿ ಅರ್ಚಕರು ಪನ್ನೀರು, ಎಳನೀರು, ಕುಂಕುಮ, ಗಂಧ, ಜೇನುತುಪ್ಪ, ಹಾಲು, ಮೊಸರು, ಹಾಗೂ ಗಂಧದ ಅಭಿಷೇಕವನ್ನು ನೆರವೇರಿಸಲಾಯಿತು. ಬಳಿಕ ದೇವಿಯ ಮೂರ್ತಿಯನ್ನು ಚಿನ್ನಾಭರಣ ಹಾಗೂ ವಿವಿಧ ಪುಷ್ಪಗಳಿಂದ ಸಿಂಗರಿಸಿ ವಿಶೇಷ ಪೂಜೆಯನ್ನು ಸಲ್ಲಿಸುವುದರ ಮೂಲಕ ಧನುರ್ಮಾಸ ಆರಂಭದ ಪೂಜೆಯನ್ನು ನೆರವೇರಿಸಲಾಯಿತು. ಮಹಾಮಂಗಳಾರತಿ ಬೆಳಗಿಸಿದ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.
ಪಟ್ಟಣ ಸೇರಿದಂತೆ ಭೈರನತ್ತ, ಮಣಗಳ್ಳಿ, ಬಂಡಳ್ಳಿ, ಉದ್ದನೂರು, ಬೆಳತ್ತೂರು, ಮಾಲಾಪುರ, ಅಜ್ಜೀಪುರ, ಚಿಂಚಳ್ಳಿ, ಮಣಗಳ್ಳಿ, ಮಂಗಲ ಹಾಗೂ ಈ ಭಾಗದ ಇನ್ನಿತರ ಕಡೆಗಳಿಂದ ಆಗಮಿಸಿದ ಭಕ್ತರು ಹಣ್ಣು ಕಾಯಿ ನೀಡಿ ಪೂಜೆ ಸಲ್ಲಿಸುವುದರ ಮೂಲಕ ದೇವರ ದರ್ಶನ ಪಡೆದರು. ಹರಕೆ ಹೊತ್ತ ಭಕ್ತರು ದೇಗುಲದ ಮುಂಭಾಗದಲ್ಲಿ ಉಪ್ಪು ಸುರಿದು ಭಕ್ತಿ ಭಾವ ಮೆರೆದರು. ಕೆಲ ಭಕ್ತರು ಪಂಚಾಮೃತ ಅಭಿಷೇಕ ವಿತರಿಸಿದರು. ದೇಗುಲದ ವತಿಯಿಂದ ಪ್ರಸಾದ ವಿನಿಯೋಗಿಸಲಾಯಿತು.