ಚಾಮರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಮಹಮ್ಮದ್ ಅಸ್ಗರ್ ಚಾಲನೆ ನೀಡಿದರು. ಡಾ.ಆರ್.ಎಸ್.ಅಶ್ವಿನಿ, ಜಿ.ಬಂಗಾರು, ಎನ್.ವಿ.ಸಿಂಧು, ಸಹನಾ, ದೀಪಿಕಾ, ಮಹಾದೇವ್ ಇತರರಿದ್ದರು. 
ಚಾಮರಾಜನಗರ

ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗೆ ಒತ್ತು ನೀಡಲಿ

ಕೆಂಡಗಣ್ಣ ಎನ್

ಪ್ರಮುಖ ಮುಖ್ಯಾಂಶಗಳು

  • sports activities
ಚಾಮರಾಜನಗರ : ವಿದ್ಯಾರ್ಥಿಗಳು ಕ್ರೀಡೆಯನ್ನು ದಿನನಿತ್ಯದ ಚಟುವಟಿಕೆ ಭಾಗವಾಗಿ ಪರಿಗಣಿಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತರುವಂತೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್ (ಮುನ್ನಾ) ಸಲಹೆ ನೀಡಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡಾ ಮನೋಭಾವ ಮೆರೆಯಬೇಕು. ಇತರ ಕ್ರೀಡಾಪಟುಗಳಿಗೂ ಮಾದರಿಯಾಗಬೇಕು. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗಿಯಾದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅವಕಾಶಗಳು ಒದಗಿ ಬರಲಿವೆ ಎಂದು ತಿಳಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಆರ್.ಎಸ್.ಅಶ್ವಿನಿ ಮಾತನಾಡಿ, ಯುವಕರಲ್ಲಿ ದೇಹ, ಮನಸ್ಸು ಸದೃಢಗೊಳ್ಳಲು ಕ್ರೀಡೆ ಅತ್ಯವಶ್ಯಕವಾಗಿದೆ. ಜಿಲ್ಲೆಗಳಲ್ಲಿ ಪ್ರತಿಭಾವಂತ ಗ್ರಾಮೀಣ ಕ್ರೀಡಾಪಟುಗಳನ್ನು ಹೊರತರಲು ಭಾರತ ಸರ್ಕಾರ ಈ ಕಾರ್ಯಕ್ರಮ ರೂಪುಗೊಳಿಸಿದೆ. ಗ್ರಾಮೀಣ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿ ಇನ್ನಷ್ಟು ಬೆಳೆಯಬೇಕು. ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ಸಿಗಬೇಕು ಎಂದರು.
ಜೈಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷ ಜಿ.ಬಂಗಾರು ಮಾತನಾಡಿ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಇತ್ತೀಚೆಗೆ ಪುರುಷರಂತೆ ಮಹಿಳಾ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಇದು ಆರೋಗ್ಯಕರ ಬೆಳವಣಿಗೆಯಾಗಿದೆ ಎಂದು ಹೇಳಿದರು.
ಕುದೇರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಎನ್.ವಿ.ಸಿಂಧು, ಮೈ ಭಾರತ್ ಕೇಂದ್ರದ ಸಹನಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಸಂಚಾಲಕರಾದ ದೀಪಿಕಾ, ದೈಹಿಕ ಶಿಕ್ಷಣ ನಿರ್ದೇಶಕ ಮಹಾದೇವ್ ಇತರರು ಉಪಸ್ಥಿತರಿದ್ದರು.