ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಅಂಗವಿಕಲರ ಕ್ರೀಡಾಕೂಟಕ್ಕೆ ಟಿ.ಜವರೇಗೌಡ ಚಾಲನೆ ನೀಡಿದರು. ಶ್ರುತಿ, ಸುರೇಶ್, ಕೆ.ಸುರೇಶ್, ಮಂಜುನಾಥ್, ರಮೇಶ್ ಇನ್ನಿತರರಿದ್ದರು.
ಚಾಮರಾಜನಗರ: ಅಂಗವಿಕಲರು ಕೀಳರಿಮೆಯಿಂದ ಹೊರಬಂದು, ನಿರಂತರ ಪರಿಶ್ರಮಪಟ್ಟರೆ ಸಾಧನೆ ಸುಲಭ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಸಲಹೆ ನೀಡಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಮಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ವಿಕಲಚೇತನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಅಂಗವಿಕಲರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು.
ಅಂಗವಿಕಲತೆ ಎಂಬುದು ದೈವದತ್ತವಾಗಿದ್ದು, ಅದನ್ನು ಮನಗಂಡು ಅಂಗವಿಕಲರು ಕೀಳರಿಮೆಯಿಂದ ಹೊರಬರಬೇಕು. ಅಂಗವಿಕಲರಾದವರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದು, ಥಾಮಸ್ ಆಲ್ವಾ ಎಡಿಸನ್ ಅವರು ಅಂಗವಿಕಲರಾಗಿದ್ದರೂ ವಿಜ್ಞಾನ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಿದ್ದಾರೆ. ಅಂತವರನ್ನು ಆದರ್ಶವಾಗಿಟ್ಟುಕೊಂಡು ಅಂಗವಿಕಲರು ಯಾವುದಾದರೂ ಒಂದು ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ನಿರಂತರ ಪರಿಶ್ರಮದಿಂದ ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು.
ನಮ್ಮ ಆಲೋಚನೆಗಳು ನಮ್ಮ ವ್ಯಕ್ತಿತ್ವವನ್ನು ರೂಪಿಸುತ್ತದೆ. ಹಾಗಾಗಿ ಒಳ್ಳೆಯ ಆಲೋಚನೆಗಳನ್ನು ಮಾಡಬೇಕಿದೆ. ನ್ಯೂನ್ಯತೆಯ ಬಗ್ಗೆ ಕೀಳರಿಮೆ ಇಟ್ಟುಕೊಂಡು ಬೇರೆಯವರಂತೆ ನಮ್ಮನ್ನು ಹೋಲಿಕೆ ಮಾಡಿಕೊಳ್ಳಬಾರದು. ಆವಿಷ್ಕಾರ, ಸಂಶೋಧನೆಗಳು ಆಕಸ್ಮಿಕವಲ್ಲ, ಅವು ನಿರಂತರ ಶ್ರಮಕ್ಕೆ ಒಲಿದಿದೆ ಎಂಬುದನ್ನು ಮನಗಾಣಬೇಕು. ಅಂಗವಿಕಲರು ಕ್ರೀಡೆ, ಸಾಹಿತ್ಯ, ಸಂಗೀತ, ಕಲೆ ಇನ್ನಿತರ ಕ್ಷೇತ್ರದಲ್ಲೂ ಸಾಧನೆ ಮಾಡಲು ಮುಂದಾಗಿ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರುತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುರೇಶ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಸುರೇಶ್, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿ ಮಂಜುನಾಥ್, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಮೇಶ್, ಸಿದ್ದಯ್ಯ, ಅಂಗವಿಕಲ ಅಂತಾರಾಷ್ಟ್ರೀಯ ಕ್ರೀಡಾಪಟು ಮನೋಜ್, ರೂಪೇಶ್, ಸಿದ್ದರಾಜು, ಕೃಷ್ಣಮೂರ್ತಿ ಹಾಗೂ ಇತರರು ಹಾಜರಿದ್ದರು.
ಕ್ರೀಡಾಕೂಟದ ಅಂಗವಾಗಿ ಜಾಥಾ: ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮದ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದಿಂದ ಪ್ರಾರಂಭವಾದ ಜಾಥಾ ವಿವಿಧ ರಸ್ತೆಗಳ ಮೂಲಕ ಸಾಗಿ ಕ್ರೀಡಾಕೂಟ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತ್ಯವಾಯಿತು. ಬಳಿಕ ಗಣ್ಯರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಅಂಗವಿಕಲರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದರು.