ಚಾಮರಾಜನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ ಮಾತನಾಡಿದರು. ಮೋನಾರೋತ್, ಎಂ.ಮುತ್ತುರಾಜ್, ಟಿ.ಜವರೇಗೌಡ, ದಿನೇಶ್ ಕುಮಾರ್ ಮೀನಾ, ಶ್ರೀಪತಿ, ಭಾಸ್ಕರ್ ಇನ್ನಿತರರಿದ್ದರು.
- ಜಿಲ್ಲಾಧಿಕಾರಿ ಶ್ರೀರೂಪ ಅಧಿಕಾರಿಗಳಿಗೆ ಸೂಚನೆ
- ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ
ಚಾಮರಾಜನಗರ: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅನುಷ್ಠಾನದಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಯೋಜನೆ ಕಾರ್ಯಕ್ರಮ ಅನುಷ್ಠಾನ ಸಂಬಂಧ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನತೆಗೆ ಕುಡಿಯುವ ನೀರು ಒದಗಿಸುವುದು ಆದ್ಯತೆ ಕೆಲಸವಾಗಿದೆ. ಈಗಾಗಲೇ ಲಭ್ಯವಿರುವ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಗ್ರಾಮೀಣ, ನಗರ, ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯನ್ನು ವಿಳಂಬ ಮಾಡದೇ ಶೀಘ್ರಗತಿಯಲ್ಲಿ ಮುಗಿಸಬೇಕು. ಕಾಮಗಾರಿ ನಿರ್ವಹಣೆಗೆ ಅನುಮತಿಗೆ ತೊಡಕಾಗಿದ್ದಲ್ಲಿ ಸಂಬಂಧಪಟ್ಟ ಇಲಾಖೆಗಳಿಗೆ ಕೂಡಲೇ ಮತ್ತೊಮ್ಮೆ ಮನವರಿಕೆ ಮಾಡಿ ಅಗತ್ಯ ಕ್ರಮ ವಹಿಸಬೇಕೆಂದು ತಿಳಿಸಿದರು.
ಕಾಡಂಚಿನ ಗ್ರಾಮಗಳಲ್ಲಿ ಮೂಲ ಸೌಕರ್ಯಗಳಿಗೆ ಕೊರತೆಯಾಗಬಾರದು. ಅರಣ್ಯ ವ್ಯಾಪ್ತಿ ಪ್ರದೇಶದ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ತೆರಳಲು ಮುಖ್ಯವಾಗಿ ರಸ್ತೆ ಅಭಿವೃದ್ದಿಯಾದರೆ ಸಾರಿಗೆ ಸೌಲಭ್ಯ ಒದಗಿಸಲು ಅನುಕಲೂಲವಾಗಲಿದೆ. ಹೀಗಾಗಿ ರಸ್ತೆ, ಕುಡಿಯುವ ನೀರು, ಇನ್ನಿತರ ಸೌಕರ್ಯಗಳನ್ನು ಕಲ್ಪಿಸಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮುಂದಾಗಬೇಕು. ಕಾಡಂಚಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಿರುವ ವಾಹನ ವ್ಯವಸ್ಥೆ ಒದಗಿಸಬೇಕು ಎಂದರು.
ಆರೋಗ್ಯ ಸೇವೆಗಳು ಜನರಿಗೆ ಸಕಾಲಕ್ಕೆ ಲಭ್ಯವಾಗಬೇಕು. ಅಪಘಾತ ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್ ಸೇವೆ ತುರ್ತಾಗಿ ದೊರೆಯಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ, ಆಸ್ಪತ್ರೆಗಳ ಕಟ್ಟಡ ನಿರ್ಮಾಣಕ್ಕೆ ಬೇಕಿರುವ ನಿವೇಶನ ಪಡೆದುಕೊಳ್ಳುವ ನಿಟ್ಟಿನಲ್ಲಿ ಬೇಗನೆ ಪ್ರಕ್ರಿಯೆಯನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಡಿ ನಿರ್ವಹಣೆಯಾಗುತ್ತಿರುವ ಹಾಸ್ಟೆಲ್‍ಗಳಿಗೆ ಅಧಿಕಾರಿಗಳು ಭೇಟಿ ಕೊಟ್ಟು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಬೇಕು. ವಿದ್ಯಾರ್ಥಿಗಳ ಹಾಜರಾತಿ, ಬಯೋಮೆಟ್ರಿಕ್, ಸಿಸಿ ಟಿವಿ ಕಾರ್ಯನಿರ್ವಹಣೆ ಬಗ್ಗೆ ವೀಕ್ಷಿಸಬೇಕು. ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಲ್ಲಿ ಪಾಲಕರ ಗಮನಕ್ಕೆ ತನ್ನಿ ಎಂದರು.
ಅಂಗನವಾಡಿ, ಶಾಲೆಗಳಲ್ಲಿ ಶಿಥಿಲಾವಸ್ಥೆಯಲಿರುವ ಕೊಠಡಿಗಳ ಬಗ್ಗೆ ಪಟ್ಟಿ ನೀಡಿ ದುರಸ್ಥಿ, ಹೊಸದಾಗಿ ನಿರ್ಮಾಣ ಮಾಡುವ ಪ್ರಸ್ತಾವನೆಗಳಿಗೆ ಸೂಕ್ತ ಅನುಸರಣೆಯಾಗಬೇಕಿದೆ. ಕೃಷಿ, ತೋಟಗಾರಿಕೆ ಚಟುವಟಿಕೆಗಳಿಗೆ ಪೂರಕವಾದ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸಬೇಕು. ಕಾರ್ಮಿಕ ಇಲಾಖೆ ಅರ್ಹ ಕಾರ್ಮಿಕರಿಗೆ ಸರ್ಕಾರದ ಪ್ರಯೋಜನಗಳನ್ನು ಪಡೆಯಲು ನೆರವಾಗುವ ಕಾರ್ಡುಗಳನ್ನು ವಿತರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿ ಶ್ರೀಪತಿ, ಭಾಸ್ಕರ್, ಸಿಮ್ಸ್ ನಿರ್ದೇಶಕ ಹಾಗೂ ಡೀನ್ ಡಾ.ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರ ಪಾಟೀಲ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಸುಧಾ, ಪ್ರಭಾರ ಜಂಟಿ ಕೃಷಿ ನಿರ್ದೇಶಕಿ ಸುಷ್ಮಾ ಹಾಗೂ ಇತರರು ಉಪಸ್ಥಿತರಿದ್ದರು.