ಚಾಮರಾಜನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿದ ಪಿಡಿಓ ಮತ್ತು ತಾಂತ್ರಿಕ ಸಹಾಯಕರನ್ನು ಸನ್ಮಾನಿಸಲಾಯಿತು. ಮೋನಾ ರೋತ್, ಶೃತಿ, ಜಿ.ಹೊನ್ನರಾಜು, ಬಸವರಾಜು, ಸಂತೋಷ್, ಶ್ರೀಕಂಠರಾಜೇ ಅರಸು ಇನ್ನಿತರರಿದ್ದರು.
- ಜಿಲ್ಲಾ ಪಂಚಾಯಿತಿ ಸಿಇಓ ಮೋನಾ ರೋತ್ ಸೂಚನೆ
- ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
- ಜ.26ರಂದು ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮಸಭೆ
ಚಾಮರಾಜನಗರ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಪಂಚಾಯಿತಿ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಕಂಡುಬರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸಮಸ್ಯಾತ್ಮಕ ಗ್ರಾಮಗಳಿಗೆ ಸಂಬಂಧಪಟ್ಟ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಖುದ್ದು ಭೇಟಿ ನೀಡಿ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು. ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸಮಸ್ಯೆ ಹೊಂದಿರುವ ಗ್ರಾಮಗಳನ್ನು ಗುರುತಿಸಿ ನೀರಿನ ಸಮರ್ಪಕ ಪೂರೈಕೆಗೆ ಕ್ರಮವಹಿಸಬೇಕು ಎಂದರು.
ತೆರಿಗೆ ವಸೂಲಾತಿಗೆ ಸಂಬಂಧಿಸಿದಂತೆ ಮಾರ್ಚ್ ಅಂತ್ಯದೊಳಗೆ ಹೆಚ್ಚು ಕರ ಸಂಗ್ರಹಣೆಗೆ ಕ್ರಮವಹಿಸಬೇಕು. ಜ.26ರಂದು ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮಸಭೆ ಆಯೋಜಿಸಿ ಮಹಾತ್ಮಗಾಂಧಿ ನರೇಗಾ ಹಾಗೂ ವಿ.ಬಿ.ಜಿ ರಾಮ್‌ಜಿ ಯೋಜನೆಗಳ ಸಾಧಕ ಬಾಧಕಗಳ ಕುರಿತು ಚರ್ಚಿಸಲು ಅಗತ್ಯ ಕ್ರಮವಹಿಸಬೇಕು. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಮಾದರಿ ಗ್ರಾಮಗಳ ಘೋಷಣೆಗೆ ಕ್ರಮವಹಿಸಬೇಕು. ಈಗಾಗಲೇ ನಿರ್ಮಾಣವಾಗಿರುವ ಶೌಚಾಲಯಗಳಿಗೆ ವೆಚ್ಚ ಪಾವತಿಸಬೇಕು ಎಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ನರೇಗಾ ಯೋಜನೆಯಡಿ ನಿಗದಿತ ಗುರಿಗನುಗುಣವಾಗಿ ಶೇ.100 ರಷ್ಟು ಪ್ರಗತಿ ಹಾಗೂ ತೆರಿಗೆ ವಸೂಲಾತಿಯಲ್ಲಿ ಹೆಚ್ಚು ಪ್ರಗತಿ ಸಾಧಿಸಿದ ಗ್ರಾಮ ಪಂಚಾಯಿತಿಗಳು ಮತ್ತು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನರಾದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಹಾಯಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶೃತಿ, ಮುಖ್ಯ ಯೋಜನಾಧಿಕಾರಿ ಜಿ.ಹೊನ್ನರಾಜು, ಮುಖ್ಯ ಲೆಕ್ಕಾಧಿಕಾರಿ ಬಸವರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಸಂತೋಷ್, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸು ಹಾಗೂ ಇತರರು ಹಾಜರಿದ್ದರು.