ಗುಂಡ್ಲುಪೇಟೆ ಪಟ್ಟಣದ ಮದ್ದಾನೇಶ್ವರ ಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶ್ರೀ ಶಿವಲಿಂಗೇಂದ್ರಸ್ವಾಮೀಜಿ, ನಟರಾಜು, ಕೆ.ಎಸ್.ಶಿವಪ್ರಸಾದ್ ಇತರರು ಇದ್ದರು.
- ಪಡಗೂರು ಅಡವಿಮಠದ ಶ್ರೀ ಶಿವಲಿಂಗೇಂದ್ರ ಸ್ವಾಮೀಜಿ ಹೇಳಿಕೆ
- ಗುಂಡ್ಲುಪೇಟೆ ಶ್ರೀ ಮದ್ದಾನೇಶ್ವರ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಗುಂಡ್ಲುಪೇಟೆ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ, ಸಂಸ್ಕೃತಿ ಹಾಗೂ ಮೌಲ್ಯಗಳನ್ನು ಕಲಿಸುವ ಮೂಲಕ ಅವರ ಭವಿಷ್ಯವನ್ನು ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಪಡಗೂರು ಅಡವಿಮಠದ ಶ್ರೀ ಶಿವಲಿಂಗೇಂದ್ರ ಸ್ವಾಮೀಜಿ ಹೇಳಿದರು.
ಪಟ್ಟಣದ ಶ್ರೀ ಮದ್ದಾನೇಶ್ವರ ಶಾಲಾ ಆವರಣದಲ್ಲಿ ಮದ್ದಾನೇಶ್ವರ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಗುರು ಎಂಬ ಪದವೇ ಅಜ್ಞಾನವೆಂಬ ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡುವ ವ್ಯಕ್ತಿಯನ್ನು ಸೂಚಿಸುತ್ತದೆ. ವಿದ್ಯಾರ್ಥಿಗಳಲ್ಲಿ ಜ್ಞಾನವನ್ನು ತುಂಬುವುದರ ಜತೆಗೆ ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದು ಸಲಹೆ ನೀಡಿದರು.
ಮಕ್ಕಳಿಗೆ ಸಂಸ್ಕಾರಯುತ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡಬೇಕು. ರಾಮನ ಆದರ್ಶ ಗುಣಗಳು ಸೇರಿದಂತೆ ಮಹನೀಯರ ಜೀವನಮೌಲ್ಯಗಳನ್ನು ಮಕ್ಕಳಿಗೆ ಪರಿಚಯಿಸುವುದರಿಂದ ಅವರು ಮಾನಸಿಕವಾಗಿ ಸದೃಢರಾಗಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಹಾಗೂ ಕೌಶಲವಿದ್ದು, ಅದನ್ನು ಗುರುತಿಸಿ ಬೆಳೆಸುವ ಜವಾಬ್ದಾರಿ ಶಿಕ್ಷಕರದ್ದಾಗಿದೆ ಎಂದು ಹೇಳಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲಕ್ಕೆ ಹೆಚ್ಚಿನ ಮಹತ್ವವಿದೆ. ಉದ್ಯೋಗಾವಕಾಶಗಳಲ್ಲಿಯೂ ವಿದ್ಯಾರ್ಥಿಗಳ ಕೌಶಲವನ್ನು ಪರಿಗಣಿಸಲಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಕೌಶಲ ಬೆಳೆಸಿಕೊಳ್ಳಬೇಕು. ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡು ನಿರಂತರ ಅಧ್ಯಯನ ಮಾಡಬೇಕು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಅವರಂತೆ ಅಗಾಧವಾದ ಅಧ್ಯಯನ, ಜ್ಞಾನ ಹಾಗೂ ಸರಳತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಷ್ಯರು ತಮ್ಮ ಗುರುಗಳಿಗೆ ಸದಾ ಗೌರವ ನೀಡಬೇಕು ಎಂದು ಸಲಹೆ ನೀಡಿದರು.
ಮದ್ದಾನೇಶ್ವರ ಶಾಲೆ ಪ್ರಾಂಶುಪಾಲ ನಟರಾಜು ಮಾತನಾಡಿ, ಶಿಕ್ಷಕ ವೃತ್ತಿ ಎಂದರೆ ಕೇವಲ ಅಕ್ಷರ ಜ್ಞಾನ ನೀಡುವುದಷ್ಟೇ ಅಲ್ಲ, ಸಮಾಜದ ಭವಿಷ್ಯದ ನಾಯಕರನ್ನು ಮತ್ತು ಉತ್ತಮ ಪ್ರಜೆಗಳನ್ನು ರೂಪಿಸುವ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠ ಕಾಯಕ. ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯಗಳು ಮತ್ತು ಜೀವನದ ಪಾಠಗಳನ್ನು ಕಲಿಸಿ ಸದೃಢ ಸಮಾಜವನ್ನು ನಿರ್ಮಾಣ ಮಾಡಲು ಶಿಕ್ಷಕರ ಪಾತ್ರ ದೊಡ್ಡದಿದೆ ಎಂದು ಹೇಳಿದರು.
ಶಿಕ್ಷಕರಾದ ಸಿದ್ದರಾಜಪ್ಪ, ಶ್ರೀನಿವಾಸನಾಯಕ, ವೀಣಾ, ಪದ್ಮಾ, ದೊಡ್ಡ ಬಸವಯ್ಯ ಮತ್ತು ಮಹದೇಶ್ವರಸ್ವಾಮಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಎಸ್.ಶಿವಪ್ರಸಾದ್(ರಾಜು), ಮುಖ್ಯಶಿಕ್ಷಕ ಪ್ರಕಾಶ್ ಇತರರು ಇದ್ದರು.