ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಅಂಗನವಾಡಿ ಕೇಂದ್ರದ ಸಮೀಪದ ಚರಂಡಿಯಲ್ಲಿ ಹೂಳು ತುಂಬಿಕೊಂಡಿದೆ.
ಗುಂಡ್ಲುಪೇಟೆ: ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಚರಂಡಿಗಳ ಹೂಳೆತ್ತಿಸದ ಕಾರಣ ಗಬ್ಬು ನಾರುತ್ತಿದ್ದರೂ ಸ್ಥಳೀಯ ಗ್ರಾಮ ಪಂಚಾಯಿತಿಯವರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯಿತಿ ಕೇಂದ್ರವೂ ಆದ ಗ್ರಾಮದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಹರಡಿದ್ದು ಸ್ವಚ್ಛತೆ ಮರೀಚಿಕೆಯಾಗಿದೆ. ಗ್ರಾಮದ ಚರಂಡಿಗಳ ಹೂಳೆತ್ತಿಸದ ಪರಿಣಾಮ ಕೊಳಚೆನೀರು ಮಡುಗಟ್ಟಿ ನಿಂತು ಅನಾರೋಗ್ಯಕ್ಕೆ ಆಹ್ವಾನ ನೀಡುತ್ತಿದೆ. ಗ್ರಾಮದ ಅಂಗನವಾಡಿ ಕೇಂದ್ರದ ಸಮೀಪ ಚರಂಡಿಯಲ್ಲಿ ಹೂಳು ಮುಚ್ಚಿಕೊಂಡು ಗಿಡಗಂಟಿಗಳು ಬೆಳೆದು ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.
ಈ ಬಗ್ಗೆ ಹಲವಾರು ಬಾರಿ ಗ್ರಾಮಪಂಚಾಯಿತಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸ್ವಲ್ಪ ಮಳೆ ಬಿದ್ದರೂ ಸೊಳ್ಳೆಗಳು ತಮ್ಮ ಸಂತತಿ ಹೆಚ್ಚಿಸಿಕೊಂಡು ಸಾಂಕ್ರಾಮಿಕ ರೋಗ ರುಜಿನಗಳಿಗೆ ಕಾರಣವಾಗುವ ಅಪಾಯವಿದೆ. ಆದ್ದರಿಂದ ಇನ್ನಾದರೂ ಸಂಬಂಧಪಟ್ಟವರು ಅಂಗನವಾಡಿ ಕೇಂದ್ರದ ಸುತ್ತಲೂ ಇರುವ ಅನೈರ್ಮಲ್ಯವನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರಾದ ಸುರೇಶ್ ಒತ್ತಾಯಿಸಿದ್ದಾರೆ.