ಚಾಮರಾಜನಗರದ ಜಿಲ್ಲಾಡಳಿತ ಭವನದ ಹಳೇ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಜಾನಪದ ಗಾಯಕ ಸಿ.ಎಂ. ನರಸಿಂಹಮೂರ್ತಿ, ಚಿತ್ರನಟ ಶ್ರೀಸಾಯಿ ಮಂಜು, ಮೈಸೂರಿನ ಅನುಬಂಧ ಸೇವಾ ಟ್ರಸ್ಟ್ ಅಧ್ಯಕ್ಷೆ ಸುಧಾಮಣಿ ಅವರನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಸನ್ಮಾನಿಸಿದರು. ವಿ.ಎನ್. ಮೂರ್ತಿ, ಡಾ.ಎ.ಎಸ್.ಪ್ರೇಮ, ಎಂ.ಎಸ್.ಕೃಷ್ಣಮೂರ್ತಿ, ಶಿವಣ್ಣ ಇದ್ದರು.
- ಅಂತರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆಗಳ ದಿನಾಚರಣೆ
- ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಅಭಿಪ್ರಾಯ
ಚಾಮರಾಜನಗರ: ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸ್ವಯಂ ಪ್ರೇರಿತವಾಗಿ ಸಮಾಜಮುಖಿಯಾಗಿ ಕೆಲಸ ಮಾಡುವ ಸ್ವಯಂ ಸೇವಾ ಸಂಸ್ಥೆಗಳ ಸೇವಾ ಮನೋಭಾವನೆ ಅನನ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾಡಳಿತ ಭವನದ ಹಳೇ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಫೆವಾರ್ಡ್-ಕ ಚಾಮರಾಜನಗರ ಜಿಲ್ಲಾ ಒಕ್ಕೂಟ ಮತ್ತು ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾಜಿಕ ಕಳಕಳಿಯ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುವ ಸ್ವಯಂ ಸೇವಾ ಸಂಸ್ಥೆಗಳು ಸಮುದಾಯದ ಸಕಾರಾತ್ಮಕ ಬದಲಾವಣೆಗೆ ಶ್ರಮಿಸುತ್ತಿವೆ. ಶೈಕ್ಷಣಿಕ, ಆರ್ಥಿಕ ಹಾಗೂ ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರದ ಸಹಭಾಗಿತ್ವದೊಂದಿಗೆ ಕೊಡುಗೆ ನೀಡುತ್ತಿವೆ. ಲಾಭರಹಿತವಾಗಿ ಕೆಲಸ ಮಾಡುವ ಸ್ವಯಂ ಸೇವಾ ಸಂಸ್ಥೆಗಳು ಸಮಾಜದ ಹಿತವನ್ನು ಬಯಸಿವೆ. ಪರಿಸರ ಸಂರಕ್ಷಣೆ, ಸ್ವಚ್ಚತೆ, ವನ್ಯಜೀವಿಗಳ ರಕ್ಷಣೆ, ಮಹಿಳೆಯರ, ದುರ್ಬಲ ವರ್ಗದವರ ಸಬಲೀಕರಣಕ್ಕಾಗಿ ದುಡಿಯುತ್ತಿರುವ ಸೇವಾ ಸಂಸ್ಥೆಗಳ ಸೇವಾ ಮನೋಭಾವ ಮಾದರಿಯಾಗಿದೆ ಎಂದರು.
ಬರ, ಪ್ರವಾಹ, ನೈಸರ್ಗಿಕ ವಿಕೋಪಗಳಂತಹ ತುರ್ತು ಪರಿಸ್ಥಿತಿಯಲ್ಲಿ ಜನರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ಸೇವಾ ಕಾರ್ಯ ತತ್ಪರತೆಯನ್ನು ಪ್ರದರ್ಶಿಸಿವೆ. ಬಡತನ, ಸಾಮಾಜಿಕ ಪಿಡುಗುಗಳ ವಿರುದ್ಧ ಜನಸಾಮಾನ್ಯರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ. ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ. ಸ್ವಯಂ ಸೇವಾ ಸಂಸ್ಥೆಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡಿ ಜನರು ಸ್ವಾವಲಂಬಿಗಳಾಗಲು ನೆರವಾಗಿವೆ ಎಂದು ತಿಳಿಸಿದರು.
ಮೈಸೂರು ವಿಭಾಗೀಯ ಫೆವಾರ್ಡ್-ಕ ನಿರ್ದೇಶಕ ವಿ.ಎನ್. ಮೂರ್ತಿ ಮಾತನಾಡಿ, 2010ರಲ್ಲಿ ಭಾರತ ಸರ್ಕಾರ ಸ್ವಯಂ ಸೇವಾ ಸಂಸ್ಥೆಗಳ ದಿನ ಆಚರಿಸುವಂತೆ ಘೋಷಿಸಿದೆ. ಸಮಾಜದ ಉತ್ತಮ ಭವಿಷ್ಯಕ್ಕಾಗಿ ಶ್ರಮಿಸುವ ಸ್ವಯಂ ಸೇವಾ ಸಂಸ್ಥೆಗಳ ದಿನಾಚರಣೆಯನ್ನು ಇಂದು ವಿಶ್ವಾದ್ಯಂತ ಆಚರಿಸಲಾಗುತ್ತಿದೆ. ಮಾನವೀಯ ನೆರವು ಹಾಗೂ ಮಾನವ ಹಕ್ಕುಗಳ ರಕ್ಷಣೆಯ ಸದುದ್ದೇಶ ಹೊಂದಿರುವ ಸ್ವಯಂ ಸೇವಾ ಸಂಸ್ಥೆಗಳು ನಾಗರಿಕ ಹಕ್ಕು ಮತ್ತು ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಸರ್ಕಾರ ಮತ್ತು ಸಮಾಜದ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.
ಫೆವಾರ್ಡ್-ಕ ಚಾಮರಾಜನಗರ ಸಂಸ್ಥೆಯ ಜಿಲ್ಲಾಧ್ಯಕ್ಷ ಕೆ.ಎನ್. ಮಂಟೇಲಿಂಗಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಗಂಗಾಧರಸ್ವಾಮಿ ಹಾಗೂ ಉದ್ಯಮಿ ಶ್ರೀನಿಧಿ ಕುದರ್ ಅಸ್ವಯಂ ಸೇವಾ ಸಂಸ್ಥೆಗಳ ಮಹತ್ವದ ಕುರಿತು ಮಾತನಾಡಿದರು. ಇದೇ ವೇಳೆ ಜಾನಪದ ಗಾಯಕ ಸಿ.ಎಂ. ನರಸಿಂಹಮೂರ್ತಿ, ಚಿತ್ರನಟ ಶ್ರೀಸಾಯಿ ಮಂಜು ಹಾಗೂ ಮೈಸೂರಿನ ಅನುಬಂಧ ಸೇವಾ ಟ್ರಸ್ಟ್ ಅಧ್ಯಕ್ಷೆ ಸುಧಾಮಣಿ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಚ್.ಆರ್. ಸುರೇಶ್, ಫೆವಾರ್ಡ್-ಕ ಮೈಸೂರು ವಿಭಾಗೀಯ ಉಪಾಧ್ಯಕ್ಷೆ ಡಾ. ಎ.ಎಸ್. ಪ್ರೇಮ, ಕಾರ್ಯಕ್ರಮ ವ್ಯವಸ್ಥಾಪಕ ಎಂ.ಎಸ್. ಕೃಷ್ಣಮೂರ್ತಿ, ಎಸ್.ಪಿ. ಬಾಲಸುಬ್ರಹ್ಮಣ್ಯಂ ಗಾನ ಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆಯ ಶಿವಣ್ಣ ಉಪಸ್ಥಿತರಿದ್ದರು.