ಹನೂರು ತಾಲೂಕಿನ ನಾಗಣ್ಣನಗರಕ್ಕೆ ಜಿಲ್ಲಾಧಿಕಾರಿ ಶ್ರೀರೂಪಾ, ಜಿಪಂ ಸಿಇಒ ಮೋನಾ ರೋತ್ ಭೇಟಿ ನೀಡಿ ಜನರಿಂದ ಸಮಸ್ಯೆ ಆಲಿಸಿದರು. ಚೈತ್ರಾ, ಉಮೇಶ್ ಇತರರಿದ್ದರು.  
ಚಾಮರಾಜನಗರ

ಕುಡಿವ ನೀರು ಪೂರೈಕೆಯಲ್ಲಿ ವ್ಯತ್ಯವಾಗದಿರಲಿ

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಶ್ರೀರೂಪಾ ಸೂಚನೆ
  • ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ

ಹನೂರು:

ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಜಿಲ್ಲಾಧಿಕಾರಿ ಶ್ರೀರೂಪಾ ಸೂಚಿಸಿದರು.

ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಣ್ಣನಗರ, ಪುದುನಗರ, ಪಳನಿಮೇಡು ಹಾಗೂ ಮಾಮರದೊಡ್ಡಿ ಗ್ರಾಮಕ್ಕೆ ಮಂಗಳವಾರ ಕುಡಿಯುವ ನೀರಿನ ಸಮಸ್ಯೆ ಸಂಬಂಧ ಜಿಪಂ ಸಿಇಒ ಮೋನಾರೋತ್ ಅವರೊಂದಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ ಮಾತನಾಡಿದರು.
ತಾಲೂಕಿನಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ಈಗಾಗಲೇ ಪರ್ಯಾಯ ವ್ಯವಸ್ಥೆಯ ಮೂಲಕ ಕೆಲ ಗ್ರಾಮಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ನೀರಿನ ಲಭ್ಯತೆ ಬಗ್ಗೆ ಮಾಹಿತಿ ಪಡೆಯಲಾಗಿದೆ. ಆದ್ದರಿಂದ ಈ ಬಗ್ಗೆ ಕೂಡಲೇ ಅಗತ್ಯ ಕ್ರಮವಹಿಸಿ ಸಮಸ್ಯೆ ಇರುವ ಗ್ರಾಮಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಖಾಸಗಿ ಬೋರ್ವೆಲ್ ಹಾಗೂ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕು. ಯಾವುದೇ ರೀತಿಯಲ್ಲೂ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ಮುಂಜಾಗ್ರತ ಕ್ರಮವನ್ನು ವಹಿಸಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ ಸಲ್ಲದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಾಗಣ್ಣ ನಗರಕ್ಕೆ ಡಿಸಿ ಭೇಟಿ ನೀಡಿದ್ದ ವೇಳೆ ಸಮಸ್ಯೆ ತೋಡಿಕೊಂಡ ಗ್ರಾಮಸ್ಥರು, ಗ್ರಾಮದಲ್ಲಿ ನೂರಾರು ಕುಟುಂಬಗಳು ವಾಸಿಸುತ್ತಿವೆ. ಆದರೆ ಯಾವ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ನಾಗಣ್ಣ ನಗರ ಗ್ರಾಮ ಸೇರಿಲ್ಲ. ಇದರಿಂದ ಮೂಲ ಸೌಕರ್ಯದಿಂದ ಮುಂಚಿತರಾಗಿದ್ದು, ತೊಂದರೆ ಅನುಭವಿಸುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಗ್ರಾಮವನ್ನು ರಾಮಾಪುರ ಗ್ರಾಮ ಪಂಚಾಯಿತಿಗೆ ಸೇರಿಸಬೇಕು ಎಂದು ಮನವಿ ಮಾಡಿದರು.
ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ತಹಸೀಲ್ದಾರ್ ಕೆ.ಎನ್ ಚೈತ್ರಾ, ತಾಪಂ ಇಒ ಉಮೇಶ್, ಪಿಡಿಒ ಪುಷ್ಪಲತಾ, ಇತರರು ಇದ್ದರು.