ಹನೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಸಂಬಂಧ ಶಾಸಕ ಎಂ.ಆರ್.ಮಂಜುನಾಥ್ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು. ಉಮೇಶ್, ರಂಗಸ್ವಾಮಿ, ಡಾ. ಶಿವರಾಜು, ಸುಧನ್ವನಾಗ್ ಇತರರಿದ್ದರು. 
ಚಾಮರಾಜನಗರ

ನೀರಿನ ಸಮಸ್ಯೆ ಗ್ರಾಮಗಳಿಗೆ ತೆರಳಿ ಪರಿಸ್ಥಿತಿ ಪರಿಶೀಲಿಸಿ

ಹನೂರು: ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಗ್ರಾಮಗಳಿಗೆ ತೆರಳಿ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದ ಸಭಾಂಗಣದಲ್ಲಿ ಶುಕ್ರವಾರ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಸಂಬಂಧ ಆಯೋಜಿಸಿದ್ಧ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.
ಈ ಬಾರಿ ಮಳೆಯಾಗದ ಪರಿಣಾಮ ಅಂತರ್ಜಲ ಮಟ್ಟ ಸಂಪೂರ್ಣ ಕುಸಿದಿದೆ. ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಮುಂದಿನ ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆ ಇಲ್ಲ. ಆದ್ದರಿಂದ ಮಳೆಯಾಗುವವರೆಗೂ ಜನರಿಗೆ ಕುಡಿಯುವ ನೀರನ್ನು ಒದಗಿಸುವುದು ಸವಾಲಿನ ಕೆಲವಾಗಿದೆ. ತೀವ್ರ ನೀರಿನ ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ ಈಗಾಗಲೇ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದರೂ ಜನಸಂಖ್ಯೆಗೆ ಅನುಗುಣವಾಗಿ ಸಾಲುತ್ತಿಲ್ಲ ಎಂಬುದು ಜನರಿಂದ ಕೇಳಿ ಬರುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಕಚೇರಿಯಲ್ಲಿ ಹೆಚ್ಚು ಹೊತ್ತು ಕೂರದೆ ಗ್ರಾಮಗಳಿಗೆ ತೆರಳಿ ನೀರಿನ ಸಮಸ್ಯೆ ಬಗೆಹರಿಸುವುದರತ್ತ ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.
ಹೆಚ್ಚು ಟ್ಯಾಂಕರ್ ಹಾಗೂ ಪರ್ಯಾಯ ವ್ಯವಸ್ಥೆಯ ಮೂಲಕ ಜನರಿಗೆ ನೀರೊದಗಿಸುವ ಕೆಲಸವಾಗಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಸಲ್ಲದು. ಇನ್ನು ನೀರಿನ ಲಭ್ಯತೆ ಕಡಿಮೆ ಇರುವ ಕಾರಣ ನೀರನ್ನು ಮಿತವಾಗಿ ಬಳಸುವಂತೆ ಗ್ರಾಮಗಳಲ್ಲಿ ಪ್ರಚಾರ ಮಾಡಬೇಕು. ಪಂಪ್‌ಸೆಟ್ ಹೊಂದಿರುವ ರೈತರಿಂದ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಕಾರ ಪಡೆಯಬೇಕು ಎಂದು ತಿಳಿಸಿದರು.
ಹನೂರು ಭಾಗದಲ್ಲಿ ಹೆಚ್ಚಿನ ರೈತರು ಕೃಷಿ ಜತೆಗೆ ಹೈನುಗಾರಿಕೆ ಅವಲಂಬಿಸಿದ್ದಾರೆ. ಮಳೆಯಾಗದಿದ್ದರೂ ಜಿಲ್ಲೆಯಲ್ಲೇ ಹಾಲು ಉತ್ಪಾದನೆಯ ಪ್ರಮಾಣದಲ್ಲಿ ತಾಲೂಕು ಪ್ರಥಮ ಸ್ಥಾನದಲ್ಲಿರುವುದೇ ಸಾಕ್ಷಿ. ಹಾಗಾಗಿ ಜನರಿಗೆ ಕುಡಿಯುವ ನೀರು ಪೂರೈಸುವುದರ ಜತೆಗೆ ಜಾನುವಾರುಗಳಿಗೆ ಮೇವು ಒದಗಿಸುವ ಕಾರ್ಯವಾಗಬೇಕಿದೆ. ಆದ್ದರಿಂದ ತಾಲೂಕಿನಲ್ಲಿ ಸುಮಾರು 500 ಎಕರೆಯಲ್ಲಿ ಮೇವು ಬೆಳೆಯಲು ಚಿಂತನೆ ನಡೆಸಲಾಗಿದೆ. ಮೇವು ಕಿಟ್ ವಿತರಣೆಗೆ ಅಗತ್ಯ ಕ್ರಮವಹಿಸಬೇಕು. ಈ ಬಗ್ಗೆ ಕ್ರಿಯಾಯೋಜನೆ ತಯಾರಿಸಿ ವರದಿ ಸಲ್ಲಿಸಬೇಕು. ಹೊರ ರಾಜ್ಯ, ಜಿಲ್ಲೆಗಳಿಗೆ ಮೇವು ಸಾಗಣೆ ತಡೆಗಟ್ಟಬೇಕು ಎಂದು ಪಶು ವೈದ್ಯಾಧಿಕಾರಿ ಡಾ.ಶಿವರಾಜು ಅವರಿಗೆ ಶಾಸಕರು ಸೂಚಿಸಿದರು.
ಇದೇ ವೇಳೆ ಪಿಡಿಒಗಳಿಂದ ಮಾಹಿತಿ ಪಡೆದ ಶಾಸಕರು ನೀರಿನ ಸಮಸ್ಯೆಯ ಪರಿಹಾರಕ್ಕೆ ಸಲಹೆ ನೀಡಿದರು. ತಾಪಂ ಇಒ ಉಮೇಶ್, ಸಹಾಯಕ ನಿರ್ದೇಶಕ ರವೀಂದ್ರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಂಗಸ್ವಾಮಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಧನ್ವನಾಗ್, ಎಇ ಪೂರ್ಣಿಮಾ, ಜೆಜೆಎಂ ಎಇಇ ಸಂತೋಷ್ ಹಾಗೂ ಪಿಡಿಒಗಳು ಇದ್ದರು.