ಅರೆಕಡುವಿನ ದೊಡ್ಡಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಮಹಿಳೆಯರು ಶಾಸಕ ಎಂ.ಆರ್. ಮಂಜುನಾಥ್‌ಗೆ ಮನವಿ ಮಾಡಿದರು.
ಹನೂರು: ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಗ್ರಾಮಗಳಿಗೆ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಬಗೆಹರಿಸಿ ನೀರು ಪೂರೈಸಲು ಕ್ರಮಕ್ಕೆ ಮುಂದಾಗಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಸೂಚಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. ತಾಲೂಕಿನಲ್ಲಿ ಮಳೆಯಾಗದ ಕಾರಣ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಜನರು ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿದರು.
ಅಧಿಕಾರಿಗಳು ಕಡ್ಡಾಯವಾಗಿ ಗ್ರಾಮಗಳಿಗೆ ತೆರಳಿ ವಾಸ್ತವ ಸ್ಥಿತಿ ಅರಿತು ಜನರ ಕಷ್ಟಗಳಿಗೆ ಸ್ಪಂದಿಸಬೇಕು. ಟ್ಯಾಂಕರ್ ಹಾಗೂ ಪರ್ಯಾಯ ವ್ಯವಸ್ಥೆಯ ಮೂಲಕ ನೀರೊದಗಿಸಬೇಕು. ಇದರಲ್ಲಿ ನಿರ್ಲಕ್ಷೃ ಸಲ್ಲದು. ಪ್ರತಿ ಮನೆಗೂ ನೀರೊದಗಿಸುವ ಉದ್ದೇಶದಿಂದ 2022ರಲ್ಲೇ ಪೂರ್ಣಗೊಳ್ಳಬೇಕಾದ ಜೆಜೆಎಂ ಕಾಮಗಾರಿ ಅರಣ್ಯ ಇಲಾಖೆ ತಡೆಹಿಡಿದ ಕಾರಣ ಸ್ಥಗಿತಗೊಂಡಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಅನುಮತಿಗಾಗಿ ಅಗತ್ಯ ಕ್ರಮವಹಿಸಲಾಗಿದ್ದು, ಮುಂದಿನ 5 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.
ಇದಕ್ಕೂ ಮುನ್ನಾ ಬೈಲೂರು ಗ್ರಾಪಂ ವ್ಯಾಪ್ತಿಯ ಅರೆಕಡುವಿನ ದೊಡ್ಡಿಯ 50ಕ್ಕೂ ಹೆಚ್ಚು ಮಹಿಳೆಯರು ಶಾಸಕ ಎಂ.ಆರ್. ಮಂಜುನಾಥ್ ಅವರನ್ನು ಭೇಟಿಯಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು.
ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು ಕೂಲಿ ಬಿಟ್ಟು ನೀರಿಗೆ ಅಲೆಯುವಂತಾಗಿದೆ. ಬಿಂದಿಗೆ ನೀರಿಗೂ ಕಷ್ಟ ಪಡುತ್ತಿದ್ದೇವೆ. ಟ್ಯಾಂಕರ್ ಮೂಲಕ ಪೂರೈಕೆಯಾಗುತ್ತಿರುವ ಹಳ್ಳದ ನೀರು ಕುಡಿಯಲು ಯೋಗ್ಯವಾಗಿಲ್ಲ. ಈ ಬಗ್ಗೆ ಸಂಬಂಧಪಟ್ಟವರಿಗೆ ತಿಳಿಸಿದರೆ ಬೇಜವಾಬ್ದಾರಿಯಿಂದ ಉತ್ತರಿಸುತ್ತಾರೆ. ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೆಹರಿಸುವಂತೆ ಮಹಿಳೆಯರು ಮನವಿ ಮಾಡಿದರು.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು ಕೂಡಲೇ ಅಗತ್ಯ ಕ್ರಮವಹಿಸಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಹಸೀಲ್ದಾರ್ ಕೆ.ಎನ್.ಚೈತ್ರಾ, ತಾಪಂ ಇಒ ಉಮೇಶ್, ಪಪಂ ಮುಖ್ಯಾಧಿಕಾರಿ ರೇಖಾ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಸಂತೋಷ್, ಎಇಇ ಸುಧನ್ವನಾಗ್, ಪಿಡಿಒಗಳು ಇದ್ದರು.