ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ರಾಮಾಪುರ ಗ್ರಾಪಂ ಕಚೇರಿ ಮುಂಭಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮುಖಂಡರಾದ ರಾಜೇಂದ್ರ, ಗಿರೀಶ್, ಬಾಬು ಹಾಗೂ ಇನ್ನಿತರರಿದ್ದರು.  
ಚಾಮರಾಜನಗರ

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ

ಹನೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮಂಗಳವಾರ ತಾಲೂಕಿನ ರಾಮಾಪುರದಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮುಖಂಡ ರಾಜೇಂದ್ರ ಮಾತನಾಡಿ, ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಇದರಿಂದ ಮಹಿಳೆಯರು ಕೂಲಿ ಕೆಲಸವನ್ನು ಬಿಟ್ಟು ನೀರಿಗಾಗಿ ಅಲೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸಮಸ್ಯೆಯನ್ನು ಬಗೆಹರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.
ಇತ್ತ ಟ್ಯಾಂಕರ್ ಮೂಲಕ ಪೂರೈಕೆಯಾಗುತ್ತಿರುವ ನೀರು ಕಲ್ಮಶವಾಗಿರುತ್ತದೆ. ಕುಡಿಯುವುದಕ್ಕೆ ಯೋಗ್ಯವಾಗಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸಮರ್ಪಕ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಬೇಕು. ಜತೆಗೆ ಶಾಶ್ವತ ವ್ಯವಸ್ಥೆಯಾಗಬೇಕು ಎಂದು ಒತ್ತಾಯಿಸಿದರು.
ಈ ಬಗ್ಗೆ ಅಗತ್ಯ ಕ್ರಮವಹಿಸುವುದಾಗಿ ಪಿಡಿಒ ಪುಷ್ಪಲತಾ ಅವರು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈ ಬಿಡಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಗಿರೀಶ್, ಬಾಬು ಹಾಗೂ ಇನ್ನಿತರರಿದ್ದರು.