ಮಾರ್ಟಳ್ಳಿಯಲ್ಲಿ ಮದ್ಯದ ಅಂಗಡಿಗಳನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿ ಮಹಿಳೆಯರು ಬಾರ್ ಮುಂಭಾಗ ಪ್ರತಿಭಟನೆ ನಡೆಸಿದರು.
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಮದ್ಯದಂಗಡಿಗಳ ಸ್ಥಳಾಂತರಕ್ಕೆ ನಿರ್ಲಕ್ಷ್ಯ ವಹಿಸಿರುವುದನ್ನು ಖಂಡಿಸಿ ಬುಧವಾರ ಮಹಿಳೆಯರು ಬಾರ್ ಮುಂಭಾಗ ಪ್ರತಿಭಟನೆ ನಡೆಸಿದರು.
ಗ್ರಾಮದ ಮುಖ್ಯ ರಸ್ತೆಯಲ್ಲಿ 3 ಮದ್ಯದ ಅಂಗಡಿಗಳಿವೆ. ಇದರಿಂದ ಶಾಲಾ, ಕಾಲೇಜು ಮಕ್ಕಳು ಹಾಗೂ ಸಾರ್ವಜನಿಕರಿಗೆ ಕುಡುಕರ ಹಾವಳಿಯಿಂದ ಕಿರಿಕಿರಿಯಾಗುತ್ತಿದೆ. ಮದ್ಯದಂಗಡಿಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಒಂದು ತಿಂಗಳಿಂದಲೂ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ, ಯಾವುದೇ ಕ್ರಮಕೈಗೊಂಡಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕಾಗಮಿಸಿದ ಅಬಕಾರಿ ಇಲಾಖೆ ಪೊಲೀಸರು ಈ ಸಂಬಂಧ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು. ಈ ವೇಳೆ ಮಹಿಳೆಯರು ಜಿಲ್ಲಾಧಿಕಾರಿ ಅವರು ಮಹಾ ಶಿವರಾತ್ರಿಗೂ ಮುನ್ನವೇ ಆಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮದ್ಯದ ಅಂಗಡಿಗಳನ್ನು ತೆರೆಯಲು ಬಿಡುವುದಿಲ್ಲ ಎಂದು ಎಚ್ಚರಿಸಿ ಸ್ಥಳದಿಂದ ಹೊರಟರು.