ಚಾಮರಾಜನಗರ: ವಿಶ್ವ ಅಂಗವಿಕಲರ ದಿನಾಚರಣೆ ಹಾಗೂ ಇದರ ಅಂಗವಾಗಿ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀರೂಪಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ವಿಶ್ವ ಅಂಗವಿಕಲರ ದಿನಾಚರಣೆ ಸಂಬಂಧ ಅಧಿಕಾರಿಗಳು, ಅಂಗವಿಕಲರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ನ. 24ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಹಿಂದೆ ನಡೆದ ಕ್ರೀಡೆಗಳ ಜತೆಗೆ ಹೆಚ್ಚುವರಿಯಾಗಿ ಅಂಗವಿಕಲರ ಸಲಹೆಯಂತೆ ಇನ್ನಷ್ಟು ಕ್ರೀಡೆಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಕ್ರೀಡಾಕೂಟದ ತೀರ್ಪುಗಾರರನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ನಿಯೋಜಿಸುವಂತೆ ತಿಳಿಸಿದರು.
ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಟೀ ಶರ್ಟ್ ವಿತರಣೆ ಮಾಡಬೇಕು. ಉಪಾಹಾರ, ಕುಡಿಯುವ ನೀರು ಪೂರೈಸಬೇಕು. ಕ್ರೀಡಾಂಗಣದಲ್ಲಿ ಆರೋಗ್ಯ ಸಿಬ್ಬಂದಿ ನಿಯೋಜಿಸಬೇಕು. ವೈವಿಧ್ಯಮಯ ಸಾಂಸ್ಕೃತಿಕ ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ಏರ್ಪಾಡು ಮಾಡಬೇಕು. ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಬರುವವರಿಗೆ ಅನುಕೂಲವಾಗುವಂತೆ ಎಲ್ಲೆಡೆ ಬಸ್ಗಳ ಕೋರಿಕೆ ನಿಲುಗಡೆಗೆ ಅನುಮತಿಸಬೇಕು ಎಂದರು.
ಡಿಸೆಂಬರ್ ತಿಂಗಳಲ್ಲಿ ಅಂಗವಿಕಲರ ಪ್ರತಿನಿಧಿಗಳ ಸಲಹೆಯಂತೆ ಸೂಕ್ತ ದಿನದಂದು ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮ ಆಯೋಜನೆ ಮಾಡಲಿದ್ದು, ಇದರ ಪೂರ್ವಭಾವಿ ಸಿದ್ಧತೆಗಳನ್ನು ಸಹ ಸಮರ್ಪಕವಾಗಿ ಮುಂಚಿತವಾಗಿಯೇ ಕೈಗೊಳ್ಳಬೇಕು. ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸೂಕ್ತ ವೇದಿಕೆ, ಆಸನಗಳು, ಶಿಷ್ಟಾಚಾರದ ಅನುಸಾರ ಎಲ್ಲ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ತಿಳಿಸಿದರು.
ಅಂಗವಿಕಲರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಅಂಗವಿಕಲರ ಪ್ರತ್ಯೇಕ ಬಹುಮಾನ ವಿತರಣೆಯಾಗಬೇಕು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಡೆಯಲಿರುವ ಜಾಥಾಕ್ಕೆ ಕಲಾತಂಡಗಳನ್ನು ನಿಯೋಜಿಸಬೇಕು. ಕಾರ್ಯಕ್ರಮದಂದು ಸಹ ಬಸ್ಸುಗಳಿಂದ ಆಗಮಿಸುವ ಅಂಗವಿಕಲರ ಜಿಲ್ಲೆಯ ಯಾವುದೇ ಭಾಗದಲ್ಲಿ ಕೋರಿಕೆ ನಿಲುಗಡೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ತಮ್ಮ ಸಿಬ್ಬಂದಿಗೆ ಸೂಚಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪಾ ನಿರ್ದೇಶನ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಸುಭದ್ರಾ ದೇವಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪಾಟೀಲ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಗಿರೀಶ್, ವಿಕಲಚೇತನರ ಕಲ್ಯಾಣಾಧಿಕಾರಿ ಮಂಜುನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಶಿವಸ್ವಾಮಿ, ವಿಶೇಷಚೇತನರ ಸಂಘಟನೆಗಳ ಪ್ರತಿನಿಧಿಗಳಾದ ರಮೇಶ್, ಕೃಷ್ಣಮೂರ್ತಿ, ಸಿದ್ದಯ್ಯ, ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.