ಎಸ್.ದತ್ತೇಶ್ ಕುಮಾರ್  
ಚಾಮರಾಜನಗರ

ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆಗೆ ಮಾನಸ ಪ್ರಶಸ್ತಿ

ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಸ್.ದತ್ತೇಶ್ ಕುಮಾರ್ ಮಾಹಿತಿ

ಕೊಳ್ಳೇಗಾಲ: ಪ್ರಸಕ್ತ 2026-27ನೇ ಸಾಲಿನ ಮಾನಸ ಪ್ರಶಸ್ತಿ ಗರಿಯನ್ನು ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಮುಡಿಗೇರುತ್ತಿರುವುದು ಹೆಮ್ಮೆಯಾಗಿದೆ ಎಂದು ಮಾನಸ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಸ್.ದತ್ತೇಶ್ ಕುಮಾರ್ ಹೇಳಿದರು.

ನಿವೃತ್ತ ನ್ಯಾಯಮೂರ್ತಿಯಾಗಿ, ಕರ್ನಾಟಕ ಲೋಕಾಯುಕ್ತರಾಗಿ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ. ನಾಡಿನಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಶ್ರಮಿಸಿದ್ದಾರೆ. ಇಂಥ ಮೇರು ವ್ಯಕ್ತಿತ್ವ ಹೊಂದಿರುವವರು ಮಾನಸ ಪ್ರಶಸ್ತಿಗೆ ಭಾಜನರಾಗುತ್ತಿರುವುದರಿಂದ ಪ್ರಶಸ್ತಿಯ ಹಿರಿಮೆ ಹೆಚ್ಚಾಗಲಿದೆ. ನ.20 ರಿಂದ 22 ರವರೆಗೆ ಮೂರು ದಿನ ಆಯೋಜಿಸಿರುವ ಮಾನಸೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮನಸೋತ್ಸವ ಉದ್ಘಾಟನೆ ಮತ್ತು ಮಾನಸ ಪ್ರಶಸ್ತಿ ಪ್ರದಾನ ಸಮಾರಂಭ ನ.20ರಂದು ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದೆ. ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಡಾ.ಶ್ರೀ ಶಾಂತಮಲ್ಲಿಕಾರ್ಜುನಸ್ವಾಮೀಜಿ, ಮೈಸೂರು ಧರ್ಮ ಪ್ರಾಂತದ ಬಿಷಪ್ ಡಾ.ಎಸ್.ಜೆ ಫ್ರಾನ್ಸಿಸ್ ಸೆರಾವೊ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಯೂ ಆದ ಸಂಸದ ಜಗದೀಶ್ ಶೆಟ್ಟರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿಶ್ರಾಂತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರಿಗೆ ಸಾಹಿತಿ ಡಾ.ಹಂಪಾ ನಾಗರಾಜಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.

ಜೇತವನದ ಮನೋರಖ್ಖಿತ ಬಂತೇಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಶಾಸಕ ಎಸ್.ಬಾಲರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 5ಕ್ಕೆ ಸಾಂಸ್ಕೃತಿಕ ಕಲರವ ಕಾರ್ಯಕ್ರಮ, 7.30ಕ್ಕೆ ಮೈಸೂರು ಅಮ್ಮ ರಾಮಚಂದ್ರ ಮತ್ತು ತಂಡದಿಂದ ಸಂಗೀತ ಸಂಜೆ ಆಯೋಜಿಸಲಾಗಿದೆ.

21ರಂದು ಗುರುವಂದನಾ, ಸಾಧಕರಿಗೆ ಸನ್ಮಾನ

ನ.21ರಂದು ಬೆಳಗ್ಗೆ ಮೈಸೂರಿನ ದೇವಾನಂದ ವರಪ್ರಸಾದ್ ಮತ್ತು ತಂಡದಿಂದ ಸಾಂಸ್ಕೃತಿಕ ಬೆಳಗು, 10.30ಕ್ಕೆ ಗುರುವಂದನಾ ಕಾರ್ಯಕ್ರಮದ ಸಾನ್ನಿಧ್ಯವನ್ನು ಮಳವಳ್ಳಿ ಹೊನ್ನನಾಯಕನಹಳ್ಳಿ ಮಂಟೇಸ್ವಾಮಿ ಮಠದ ಪೀಠಾಧಿಪತಿ ಶ್ರೀ ಎಂ.ಎಲ್.ವರ್ಚಸ್ವಿ ಶ್ರೀಕಂಠ ಸಿದ್ದಲಿಂಗರಾಜೇ ಅರಸ್ ವಹಿಸಲಿದ್ದಾರೆ. ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತ ಕೆ.ರಾಮನ್ ಗುರುವಂದನೆ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಮಧ್ಯಾಹ್ನ 2ಕ್ಕೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ಸಮಾರಂಭ, 3 ಗಂಟೆಗೆ ಕ್ರೀಡಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ವಾಟಾಳು ಶ್ರೀ ಸೂರ್ಯ ಸಿಂಹಾಸನ ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದಾರೆ. ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 5 ಕ್ಕೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸಂಜೆ, 7 ಗಂಟೆಗೆ ಶ್ರೀ ಮಂಟೇಸ್ವಾಮಿ ಕಥಾ ಪ್ರಸಂಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

22ರಂದು ಸಮಾರೋಪ, ಸಂಗೀತ ಸಂಜೆ

ನ.22ರಂದು ಬೆಳಗ್ಗೆ 9 ಗಂಟೆಗೆ ಮೈಸೂರಿನ ಸುಜಲಹರಿ ಮೇಲೋಡೀಸ್ ವತಿಯಿಂದ ಸಾಂಸ್ಕೃತಿಕ ಬೆಳಗು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 10.30ಕ್ಕೆ ಪ್ರತಿಭಾ ಪುರಸ್ಕಾರ ಹಾಗೂ ರ‌್ಯಾಂಕ್ ವಿಜೇತರಿಗೆ ಸನ್ಮಾನ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಬೆಂಗಳೂರಿನ ವಿಜಯನಗರ ಶಾಖಾಮಠದ ಶ್ರೀ ಆದಿಚುಂಚನಗಿರಿ ಶ್ರೀ ಸೌಮ್ಯನಾಥಸ್ವಾಮೀಜಿ ವಹಿಸಲಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿ ಇ.ಎಸ್ ಇಂದಿರೇಶ್ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಹನೂರು ಶಾಸಕ ಎಂ.ಆರ್. ಮಂಜುನಾಥ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 2ಗಂಟೆಗೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ. ಬಳಿಕ, 3 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯವನ್ನು ಹೊಸದುರ್ಗ ಶ್ರೀ ಭಗೀರಥ ಉಪ್ಪಾರ ಪೀಠದ ಪೀಠಾಧ್ಯಕ್ಷ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆವಹಿಸಿ ಸಾಧಕರಿಗೆ ಸನ್ಮಾನಿಸಲಿದ್ದಾರೆ. ಸಾಹಿತಿ ಪ್ರೊ.ಕೃಷ್ಣಮೂರ್ತಿ ಸಮಾರೋಪ ಭಾಷಣ ಮಾಡಲಿದ್ದಾರೆ. ಸಂಜೆ 6ಕ್ಕೆ ಸಾಂಸ್ಕೃತಿಕ ಕಲರವ, ರಾತ್ರಿ 7.30 ಕ್ಕೆ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ.