ಮಲೆಮಹದೇಶ್ವರ ಬೆಟ್ಟದ ಶ್ರೀ ಮಲೆಮಹದೇಶ್ವರ ಸ್ವಾಮಿ ವಿದ್ಯಾ ಸಂಸ್ಥೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಸಿದ್ದರಾಜು, ಮಹದೇವ ಪ್ರಭುಸ್ವಾಮಿ, ಶಿವಕುಮಾರಸ್ವಾಮಿ ಇತರರಿದ್ದರು. 
ಚಾಮರಾಜನಗರ

ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಹೊಂದಿ

ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಸಲಹೆ

ಹನೂರು : ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀ ಮಲೆಮಹದೇಶ್ವರ ಸ್ವಾಮಿ ವಿದ್ಯಾ ಸಂಸ್ಥೆಗೆ ಶುಕ್ರವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಈ ವೇಳೆ ಅವರು ಮಾತನಾಡಿ, ಮಕ್ಕಳು ದೇಶದ ಆಸ್ತಿ. ಅಭಿವೃದ್ಧಿಯ ಪ್ರತೀಕ. ಶಿಕ್ಷಣ ಪಡೆಯುವುದು ಇವರ ಹಕ್ಕು. ಹಾಗಾಗಿ ಸರ್ಕಾರ ಕಡ್ಡಾಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ಆದ್ದರಿಂದ ಪ್ರತಿಯೊಬ್ಬರೂ ಓದಿನ ಕಡೆ ಹೆಚ್ಚಿನ ಗಮನ ನೀಡುವುದರ ಮೂಲಕ ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು. ಉತ್ತಮ ಜೀವನವನ್ನು ರೂಪಿಸಿಕೊಳ್ಳುವುದರತ್ತ ಗಮನಹರಿಸಬೇಕು. ಇದಕ್ಕೆ ಶಿಕ್ಷಕರು ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು. ಇದೇ ವೇಳೆ ಮಕ್ಕಳ ಹಕ್ಕುಗಳ ರಕ್ಷಣೆ, ದೊರೆಯುವ ಸೌಕರ್ಯಗಳ ಬಗ್ಗೆ ತಿಳಿಸಿ ಕೊಡಲಾಯಿತು. ಜಿಲ್ಲಾ ಮಕ್ಕಳ ಸಹಾಯವಾಣಿ ಸಂಯೋಜಕ ಸಿದ್ದರಾಜು, ಪ್ರಾಂಶುಪಾಲ ಮಹದೇವ ಪ್ರಭುಸ್ವಾಮಿ, ಮುಖ್ಯ ಶಿಕ್ಷಕ ಎಚ್. ಎನ್. ಶಿವಕುಮಾರ ಸ್ವಾಮಿ ಇನ್ನಿತರರು ಇದ್ದರು.