ಚಾಮರಾಜನಗರ: ರಜತ ಸಂಭ್ರಮದಲ್ಲಿರುವ ಚಾಮರಾಜನಗರ ಜಿಲ್ಲೆಯ ಬೆಳ್ಳಿ ಹಬ್ಬವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರೊಂದಿಗೆ ಚರ್ಚಿಸಿ ಸರ್ಕಾರದ ವತಿಯಿಂದ ಮುಂದಿನ ದಿನಗಳಲ್ಲಿ ಆಚರಿಸಲಾಗುವುದು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ರಾಜ್ಯ ಘಟಕದ ವತಿಯಿಂದ ಜಿಲ್ಲೆಯ ಬೆಳ್ಳಿಹಬ್ಬ ಮಹೋತ್ಸವ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಚಾಮರಾಜನಗರ ಜಿಲ್ಲೆಯ ಪ್ರಬುದ್ಧ ರಾಜಕಾರಣ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಎಚ್.ಎಸ್. ಮಹದೇವಪ್ರಸಾದ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂದರ್ಭ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿದೆ. ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳಿದ್ದು, ಇಂಜಿನಿಯರಿಂಗ್, ಮೆಡಿಕಲ್, ಕೃಷಿ, ಕಾನೂನು ಕಾಲೇಜುಗಳು, ವಿಶ್ವವಿದ್ಯಾಲಯ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳು ಆಗಲು ದಿ.ಮಹದೇವಪ್ರಸಾದ್ ಕಾರಣರಾಗಿದ್ದಾರೆ ಎಂದರು.
ಇದೇ ವೇಳೆ ಮಾಜಿ ಶಾಸಕರಾದ ಎಸ್. ಜಯಣ್ಣ, ಎ.ಆರ್. ಕೃಷ್ಣಮೂರ್ತಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಪ್ರತಾಪ್, ಜಿಪಂ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ, ಮಾಜಿ ಸದಸ್ಯ ಬಿ.ಪಿ. ನಟರಾಜಮೂರ್ತಿ, ಅಂತಾರಾಷ್ಟ್ರೀಯ ಕ್ರೀಡಾಪಟು ಎಂ. ಮಾನ್ಯಾ, ಬಿಎಸ್ಪಿ ಜಿಲ್ಲಾಧ್ಯಕ್ಷ ಎನ್. ನಾಗಯ್ಯ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಜೆಡಿಎಸ್ ವಕ್ತಾರ ಎನ್. ರಾಜೂಗೌಡ ಸೇರಿದಂತೆ ಇತರರನ್ನು ಸನ್ಮಾನಿಸಲಾಯಿತು. ಹರವೆ ವಿರಕ್ತಮಠದ ಶ್ರೀಸರ್ಪಭೂಷಣ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಅಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಗರಸಭೆ ಮಾಜಿ ಅಧ್ಯಕ್ಷ ಸುರೇಶ್‌ನಾಯಕ, ಮಾಜಿ ಸದಸ್ಯ ಗಣೇಶ್ ದೀಕ್ಷಿತ್, ಜೆಡಿಎಸ್ ತಾಲೂಕು ಅಧ್ಯಕ್ಷ ಸೈಯದ್ ಅಕ್ರಂ, ಕನ್ನಡಪರ ಹೋರಾಟಗಾರರಾದ ಶಾ. ಮುರಳಿ, ಚಾ.ವೆಂ. ರಾಜಗೋಪಾಲ್, ನಿಜಧ್ವನಿ ಗೋವಿಂದರಾಜು, ಪಣ್ಯದಹುಂಡಿ ರಾಜು, ಚಾ.ರಾ. ಕುಮಾರ್, ಅರುಣ್‌ಕುಮಾರ್‌ಗೌಡ, ಸಾಗರ್ ರಾವತ್ ಇತರರು ಹಾಜರಿದ್ದರು.