ಚಾಮರಾಜನಗರ : ಉಸ್ತುವಾರಿ ಸಚಿವರಿಗೆ ಅಹವಾಲು ಸಲ್ಲಿಸಲು ಬಂದ ನಾಗರಿಕನ ಮೇಲೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಬೆಂಬಲಿಗನೊಬ್ಬ ಹಲ್ಲೆಗೆ ಯತ್ನಿಸಿದ್ದಲ್ಲದೆ ಸಚಿವರ ಮುಂದೆಯೇ ಮಾತಿನ ಚಕಮಕಿ ನಡೆಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸಾರ್ವಜನಿಕರ ಅಹವಾಲು ಆಲಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಗೆ ನಗರದ ನಿವಾಸಿ ಸಯ್ಯದ್ ಖಾಸಿಂ ಅಹವಾಲು ಸಲ್ಲಿಸಲು ಬಂದಿದ್ದರು. ಈ ವೇಳೆ ಸಯ್ಯದ್ ಖಾಸಿಂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರನ್ನು ತರಾಟೆಗೆ ತೆಗೆದುಕೊಂಡು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಸಂದರ್ಭದಲ್ಲಿ ನಮ್ಮ ಮನೆಯನ್ನು ಒಡೆದು ಹಾಕಿದ್ದು, ಈವರೆಗೂ ನಮಗೆ ಪರಿಹಾರ ದೊರೆತಿಲ್ಲ. ಕೊಳ್ಳೇಗಾಲದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಸದನದಲ್ಲಿ ಈ ಬಗ್ಗೆ ಗಮನ ಸೆಳೆದಿದ್ದಾರೆ. ನಮ್ಮ ಕ್ಷೇತ್ರದ ಶಾಸಕರಾಗಿ ನೀವು ಏನು ಕ್ರಮವಹಿಸಿದ್ದೀರಿ ಎಂದು ಖಾರವಾಗಿ ಪ್ರಶ್ನಿಸಿದರು.
ಈ ವೇಳೆ ಶಾಸಕ ಪುಟ್ಟರಂಗಶೆಟ್ಟಿ ಬೆಂಬಲಿಗರೊಬ್ಬರು ಏಕಾಏಕಿ ಸಯ್ಯದ್ ಖಾಸಿಂ ಅವರ ಮೇಲೆ ಹಲ್ಲೆ ಮಾಡಲು ಮುಂದಾದರು. ಸ್ಥಳದಲ್ಲೇ ಇದ್ದ ಪೊಲೀಸರು ಹಲ್ಲೆ ಮಾಡುವುದನ್ನು ತಡೆದರು. ಆದರೆ, ಕಾಂಗ್ರೆಸ್ ಮುಖಂಡರು ಮತ್ತು ಸಯ್ಯದ್ ಖಾಸಿಂ ನಡುವೆ ಉಸ್ತುವಾರಿ ಸಚಿವರ ಮುಂದೆಯೇ ಕೆಲಕಾಲ ಮಾತಿನ ಚಕಮಕಿ ಉಂಟಾಯಿತು. ಮಧ್ಯೆ ಪ್ರವೇಶಿಸಿದ ಪೊಲೀಸರು ಅರ್ಜಿ ಸಲ್ಲಿಸಲು ಬಂದಿದ್ದ ಸಯ್ಯದ್ ಅವರನ್ನು ಕಚೇರಿಯಿಂದ ಹೊರಕಳುಹಿಸಿದರು. ಈ ಸಂದರ್ಭದಲ್ಲಿ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಅಧಿಕಾರಿಗಳು ಹಾಜರಿದ್ದರು.
ಗೂಂಡಾವರ್ತನೆ ಆರೋಪ:
ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಿಂದ ಜಿಲ್ಲಾಡಳಿತ ಭವನದ ಮುಂಭಾಗಕ್ಕೆ ಬಂದ ಸಯ್ಯದ್ ಖಾಸಿಂ ಅವರು ಒಬ್ಬರೇ ಕೆಲಕಾಲ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಶಾಸಕರು ಮತ್ತು ಅವರ ಬೆಂಬಲಿಗರು ಗೂಂಡಾಗಳಂತೆ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮಾಡಿ 7 ವರ್ಷಗಳು ಕಳೆದಿವೆ. ಆದರೆ ನಮಗೆ ಯಾವುದೇ ಪರಿಹಾರ ಬಂದಿಲ್ಲ. ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಹಕ್ಕುಪತ್ರಗಳನ್ನು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸತತ 4ನೇ ಬಾರಿ ಗೆಲುವು ದಾಖಲಿಸಿದ ಕಾರಣಕ್ಕೆ ಸರ್ವಾಧಿಕಾರಿಗಳಂತೆ ವರ್ತನೆ ಮಾಡುತ್ತಿದ್ದಾರೆ. ಈ ಹಿಂದೆ ಇದ್ದ ಕಾಂಗ್ರೆಸ್ ಮುಖಂಡರು ನೀಡಿರುವ ಭರವಸೆ ಸುಳ್ಳಾಗಿದೆ. ನಮಗೆ ಪರಿಹಾರ ದೊರೆಯಲಿಲ್ಲ ಅಂದರೆ ಆಮರಣಾಂತ ಉಪವಾಸ ಮಾಡುತ್ತೇನೆ ಎಂದು ಅಳಲು ತೋಡಿಕೊಂಡರು.
ಕಾಂಗ್ರೆಸ್ ಕಾರ್ಯಕರ್ತರ ಸಭೆಯಾಯಿತೇ?:
ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಕಾಂಗ್ರೆಸ್ ಕಾರ್ಯಕರ್ತರ ಸಭೆಯಂತೆ ಭಾಸವಾಯಿತು ಎಂದು ಸಾರ್ವಜನಿಕರು ಬೇಸರ ಹೊರಹಾಕಿದರು. ಉಸ್ತುವಾರಿ ಸಚಿವರ ಕಚೇರಿಯಲ್ಲಿ ತಮ್ಮ ಸಂಕಷ್ಟಗಳನ್ನು ಹೇಳಿಕೊಳ್ಳಲು ಬಂದಿದ್ದ ಸಾರ್ವಜನಿಕರಿಗಿಂತಲೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೇ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ಕಚೇರಿಯಲ್ಲಿ ಕೆಲಕಾಲ ಉಂಟಾದ ಗೊಂದಲವನ್ನು ನೋಡಿ ಹಲವು ಅಧಿಕಾರಿಗಳು ಅಲ್ಲಿಂದ ತೆರಳಿದರು. ಈ ನಡುವೆ ದೂರದ ಊರುಗಳಿಂದ ಬಂದಿದ್ದ ಹಲವು ಸಾರ್ವಜನಿಕರು ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಗೆ ತಮ್ಮ ಅಹವಾಲು ಸಲ್ಲಿಸಿದರು.