ಚಾಮರಾಜನಗರ: ಚಾ.ನಗರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದ ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಬೆಂಬಲಿಗರು ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದಾರೆ.
ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಶನಿವಾರ ಆಯೋಜಿಸಿದ್ದ ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಅಭಿಮಾನಿಗಳು ಹಾಗೂ ಹಿತೈಷಿಗಳ ಸಭೆಯಲ್ಲಿ ಬೆಂಬಲಿಗರು ಈ ನಿರ್ಧಾರ ಕೈಗೊಂಡರು. ಈ ಸಂದರ್ಭದಲ್ಲಿ ಮುಖಂಡ ಬಸವನಪುರ ರಾಜಶೇಖರ್ ಮಾತನಾಡಿ,
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ನಮ್ಮ ನಾಯಕರಾದ ಕೋಟೆ ಎಂ.ಶಿವಣ್ಣ ಅವರು ಪ್ರಬಲ ಆಕಾಂಕ್ಷಿಯಾಗಿದ್ದರು. ಹಿರಿಯ ಮುಖಂಡರಾಗಿದ್ದರು, ಅವರಿಗೆ ಅರ್ಹತೆ ಇದ್ದರೂ ಬಿಜೆಪಿ ಟಿಕೆಟ್ ತಪ್ಪಿಸಿತು. ಚಾ.ನಗರ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಭೆಗಳಿಗೆ ಅವರನ್ನು ಆಹ್ವಾನ ಮಾಡದೇ ಬಿಜೆಪಿ ಅವಮಾನ ಮಾಡಿದೆ. ಈ ನಿಟ್ಟಿನಲ್ಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ ಗೊಂಡಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯಾದ್ಯಂತ ಮಾದಿಗ ಮುನ್ನಡೆ ಸಮಾವೇಶ ನಡೆಸಲು ಕೋಟೆ ಶಿವಣ್ಣ ಅವರ ಪಾತ್ರ ಅಪಾರವಾಗಿದೆ. ಚಾ.ನಗರ ಲೋಕಸಭಾ ಕ್ಷೇತ್ರದಲ್ಲಿ ಅವರ ಬೆಂಬಲಿಗರು ಸಾಕಷ್ಟು ಸಂಖ್ಯೆಯಲ್ಲಿ ಇದ್ದಾರೆ. ಆದರೆ ಕೋಟೆ ಎಂ.ಶಿವಣ್ಣ ಬೆಂಬಲಿಗರು ಎಂಬ ಕಾರಣಕ್ಕೆ ಜಿಲ್ಲೆಯಲ್ಲಿ ದಲಿತ ಮುಖಂಡರನ್ನು ಕಡೆಗಣಿಸಲಾಗಿದೆ. 15 ವರ್ಷಗಳಿಂದ ಬಿಜೆಪಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿರುವವರನ್ನು ಸೂಕ್ತ ರೀತಿಯಲ್ಲಿ ನಡೆಸಿಕೊಳ್ಳುತ್ತಿಲ್ಲ. ಈ ನಿಟ್ಟಿನಲ್ಲಿ ಅವರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎಂದರು.
ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ ರಾಮಸಮುದ್ರ ಶಿವಕುಮಾರ್ ಮಾತನಾಡಿ, ಕೋಟೆ ಎಂ.ಶಿವಣ್ಣ ಅವರು ಮಾದಿಗ ಸಮುದಾಯದ ಪ್ರಬಲ ಮುಖಂಡರಾಗಿದ್ದಾರೆ. ಬಿಜೆಪಿ ಅವರಿಗೆ ಟಿಕೆಟ್ ನೀಡಬೇಕಿತ್ತು. ಈ ಬಾರಿಯ ಚುನಾವಣೆ ನಮ್ಮ ಸಮುದಾಯದ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ನಾವೆಲ್ಲರೂ ಅವರ ಬೆಂಬಲಿಗರಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇವೆ ಎಂದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟರಾಜು, ಕೆನರಾ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಬಸವರಾಜು, ಮುಳ್ಳೂರು ರೇಚಣ್ಣ, ಕೆಸ್ತೂರು ಮರಪ್ಪ, ಲಿಂಗರಾಜು, ರಾಜು, ಸುಂದರ್, ಬಿ.ಮಹದೇವ್, ಯಳಂದೂರು ಮಹೇಶ್, ಕುಮಾರ್, ಮಲ್ಲೇಶ್ ಹಾಗೂ ಇತರರು ಭಾಗವಹಿಸಿದ್ದರು.