ಚಾಮರಾಜನಗರ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಚಾಮರಾಜನಗರ ಜಿಲ್ಲಾದ್ಯಂತ ಜು.13ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದ್ದಲ್ಲಿ, ಮೊದಲೇ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಆಯಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಆನ್‌ಲೈನ್, ವೀಡಿಯೊ ಕಾನ್ಫರೆನ್ಸ್, ಇ-ಮೇಲ್, ಎಸ್.ಎಂ.ಎಸ್., ವಾಟ್ಸ್‌ಆಪ್ ಮೂಲಕ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ಲೋಕ್ ಅದಾಲತ್ ನಿಮಿತ್ತ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜೀ ಯೋಗ್ಯ ದಾವೆ, ಪ್ರಕರಣಗಳನ್ನು ಶೀಘ್ರ ಪರಿಣಾಮಕಾರಿ ತೀರ್ಮಾನಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎ.ಡಿ.ಆರ್. ಕಟ್ಟಡದಲ್ಲಿ ಪೂರ್ವಭಾವಿ ಸಮಾಲೋಚನಾ ಕೇಂದ್ರ ತೆರೆಯಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ಲೋಕ್‌ಅದಾಲತ್‌ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪನೆ, ಕೈಗಾರಿಕಾ ಕಾರ್ಮಿಕ ವೇತನ, ಗ್ರಾಹಕರ ವೇದಿಕೆ, ರಿಯಲ್ ಎಸ್ಟೇಟ್, ಸಾಲ ವಸೂಲಾತಿ, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ, ಚೆಕ್ ಅಮಾನ್ಯ, ಮೋಟಾರ್ ಅಪಘಾತ ಪರಿಹಾರ, ಕಾರ್ಮಿಕ ವಿವಾದಗಳು, ವಿದ್ಯುತ್ ಮತ್ತು ನೀರಿನ ಶುಲ್ಕ, ಭೂ ಸ್ವಾಧೀನ, ವೇತನ ಭತ್ಯೆ ಹಾಗೂ ಪಿಂಚಣಿ, ಸಾರ್ವಜನಿಕ ಉಪಯುಕ್ತತೆ ಸೇವೆ, ರಾಜಿ ಯೋಗ್ಯ ಸಿವಿಲ್ ಮತ್ತು ಕ್ರಿಮಿನಲ್ ಹಾಗೂ ಇತರೆ ಪ್ರಕರಣಗಳು, ಕುಟುಂಬ ನ್ಯಾಯಾಲಯದ ಪ್ರಕರಣ (ವಿವಾಹ ವಿಚ್ಛೇದನವನ್ನು ಹೊರತುಪಡಿಸಿ) ಗಳನ್ನು ಇತ್ಯರ್ಥಪಡಿಸಲಾಗುವುದು.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವೂ ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.
ಪ್ರತಿದಿನ ಚಾಮರಾಜನಗರ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಲೋಕ್ ಅದಾಲತ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳು ಭೌತಿಕ ಹಾಗೂ ವೀಡಿಯೋ ಕಾನ್ಫರೆನ್ಸ್ ಮೂಲಕ ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯದ ಎಸ್.ಒ.ಪಿ ನಿಯಮಗಳಂತೆ ನಡೆಯುತ್ತವೆ. ನ್ಯಾಯಾಲಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಸಹಾಯವಾಣಿ ಸಂ 15100, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಹಾಯವಾಣಿ ಸಂಖ್ಯೆ 1800-425-90900, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಾಯವಾಣಿ ಸಂಖ್ಯೆ 08226-226022, ಕೊಳ್ಳೇಗಾಲ ತಾಲ್ಲೂಕು ಕಾನೂನು ಸೇವಾ ಸಮಿತಿ ಸಹಾಯವಾಣಿ ಸಂಖ್ಯೆ 08224-256788, ಗುಂಡ್ಲುಪೇಟೆ ತಾಲ್ಲೂಕು ಕಾನೂನು ಸೇವಾ ಸಮಿತಿ ಸಹಾಯವಾಣಿ ಸಂಖ್ಯೆ 08229-223279, ಯಳಂದೂರು ತಾಲ್ಲೂಕು ಕಾನೂನು ಸೇವಾ ಸಮಿತಿ ಸಹಾಯವಾಣಿ ಸಂಖ್ಯೆ 08226-240229 ಸಂಪರ್ಕಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಧರ. ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.