ಹನೂರು: ತಾಲೂಕಿನ ಪಿ.ಜಿ ಪಾಳ್ಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿದ್ದ ಸುಮಾರು 30ಕ್ಕೂ ಹೆಚ್ಚು ಮರಗಳ ರೆಂಬೆ ಕೊಂಬೆಗಳನ್ನು ಯಾವುದೇ ಅನುಮತಿ ಇಲ್ಲದೆ ಕತ್ತರಿಸಲಾಗಿದೆ ಎಂದು ಗ್ರಾಪಂ ಅಧ್ಯಕ್ಷ ಸಂತೋಷ್ ಕುಮಾರ್ ಆರೋಪಿಸಿದ್ದಾರೆ.
ಆಸ್ಪತ್ರೆಯ ಆವರಣದಲ್ಲಿ ಉತ್ತಮ ವಾತಾವರಣವನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಕೋಟಿ ವೃಕ್ಷ ಅಭಿಯಾನದಡಿ ಸಸಿಗಳನ್ನು ನೆಟ್ಟು ಬೆಳೆಸಲಾಗಿತ್ತು. ಇದರಿಂದ ಆಸ್ಪತ್ರೆಗೆ ಆಗಮಿಸುವವರು ಮರದ ನೆರಳಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಆಸ್ಪತ್ರೆಯ ವೈದ್ಯೆ ಡಾ.ಪ್ರಿಯಾ ಅವರು ಅರಣ್ಯ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆಯದೇ ಕೂಲಿ ಕಾರ್ಮಿಕರ ಮೂಲಕ ಸುಮಾರು 30ಕ್ಕೂ ಹೆಚ್ಚು ಮರಗಳ ರೆಂಬೆ ಕೊಂಬೆಯನ್ನು ಕತ್ತರಿಸಿದ್ದಾರೆ. ಇದರಿಂದ ಉತ್ತಮ ವಾತಾವರಣ ಹದಗೆಟ್ಟಂತಾಗಿದೆ. ಅರಣ್ಯ ಇಲಾಖೆಯ ನಿಯಮವನ್ನು ಗಾಳಿಗೆ ತೂರಿದ್ದಾರೆ. ಈ ಬಗ್ಗೆ ಪರಿಸರ ಪ್ರೇಮಿಗಳಿಂದ ಆಕ್ಷೇಪ ವ್ಯಕ್ತವಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವುದರ ಮೂಲಕ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.