ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಗುರುವಾರ ಬಾದಾಮಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನಿಗೆ ವಿಶೇಷ ಪೂಜೆ ನೆರವೇರಿತು. ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಉಘೇ ಮಾದಪ್ಪ ಎಂದು ಉದ್ಘೋಷ ಮೊಳಗಿಸಿದರು.
ದೇಗುಲವನ್ನು ವಿವಿಧ ಪುಷ್ಪ, ತಳಿರು-ತೋರಣದಿಂದ ಸಿಂಗಾರ ಮಾಡಲಾಗಿತ್ತು. ಗೋಪುರವನ್ನು ವಿವಿಧ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವಂತೆ ಮಾಡಲಾಗಿತ್ತು. ಬೇಡಗಂಪಣ ಸರದಿ ಅರ್ಚಕರಿಂದ ದೇವರಿಗೆ ಅಮಾವಾಸ್ಯೆ ವಿಶೇಷ ಪೂಜೆ ನಡೆಯಿತು. ಸಾವಿರಾರು ಭಕ್ತರು ಮಾದಪ್ಪನ ಸನ್ನಿಧಿಗೆ ಭೇಟಿ ನೀಡಿದ್ದರು. ವಿವಿಧ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗುವುದರ ಮೂಲಕ ಹರಕೆ ಹೊತ್ತವರು ವಿವಿಧ ಸೇವೆಗಳನ್ನು ಸಲ್ಲಿಸಿದರು.
ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಬೆಳಗಿನ ಜಾವ 3 ಗಂಟೆಯಿಂದ 6.30ರವರೆಗೆ ಸ್ವಾಮಿಗೆ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಉಪವಾಸವಿದ್ದ ಬೇಡಗಂಪಣ ಸರದಿ ಅರ್ಚಕರು ಸತ್ತಿಗೆ, ಸೂರಿಪಾನಿ, ಛತ್ರಿ ಚಾಮರ ಹಾಗೂ ವಾದ್ಯಮೇಳದೊಂದಿಗೆ ದೇಗುಲ ಸಮೀಪದ ನಂದನವನದ ಮಜ್ಜನ ಬಾವಿಗೆ ತೆರಳಿ ಆಗ್ರೋದಕ ಹಾಗೂ ಬಾಯಿಗೆ ಬಟ್ಟೆ ಕಟ್ಟಿಕೊಂಡು ಕರೆದ ಹಾಲಿಗೆ ಪೂಜೆಯನ್ನು ಸಲ್ಲಿಸಿ ಮೆರವಣಿಗೆ ಮೂಲಕ ದೇಗುಲಕ್ಕೆ ತಂದರು. ಬಳಿಕ ಸ್ವಾಮಿಗೆ ಸಂಕಲ್ಪಾಧಿ, ಗಣಪತಿ ಪೂಜೆ, ಪಂಚಕಳಸ ಪೂಜೆ, ಏಕವಾರು ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಎಳನೀರು, ಜೇನುತುಪ್ಪ, ಮೊಸರು, ಸಕ್ಕರೆ, ಖರ್ಜೂರ, ದ್ರಾಕ್ಷಿಯ ಮೂಲಕ ಹಾಲಿನ ಅಭಿಷೇಕ ನೆರವೇರಿಸಿದರು.
ಬಳಿಕ 2ನೇ ಅಭಿಷೇಕದ ವಿಶೇಷ ಪೂಜೆಯಲ್ಲಿ ಮಾದಪ್ಪನಿಗೆ ಅಭಿಷೇಕ ಅರ್ಚನೆ, ಏಕವಾರು ರುದ್ರಾಭಿಷೇಕ, ಸಂಕಲ್ಪ ಬಿಲ್ವಾರ್ಚನೆ, ನವರತ್ನ ಕೀರಿಟಧಾರಣೆಯೊಂದಿಗೆ ದೇವರ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿ ಧೂಪದಾರತಿ ಹಾಗೂ ಮಹಾ ಮಂಗಳಾರತಿ ಬೆಳಗಿಸುವುದರ ಮೂಲಕ ಅಮಾವಾಸ್ಯೆ ಪೂಜೆ ನೆರವೇರಿಸಲಾಯಿತು. ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು. ಬಹುತೇಕ ಭಕ್ತರು ಸರದಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರೆ, ಕೆಲವರು 500 ರೂ. ಟಿಕೆಟ್ ಪಡೆದು ರಾಜಗೋಪುರದ ವಿಶೇಷ ಕೌಂಟರ್ ಮೂಲಕ ತೆರಳಿ ದರ್ಶನ ಪಡೆದರು.
ಉತ್ಸವದಲ್ಲಿ ಭಾಗಿಯಾದ ಭಕ್ತರು
ಭಕ್ತರು ಹುಲಿವಾಹನ, ರುದ್ರಾಕ್ಷಿವಾಹನ ಹಾಗೂ ಬಸವ ವಾಹನವನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿಸುವುದರ ಮೂಲಕ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಈ ಉತ್ಸವಗಳು ಬೆಳಗ್ಗೆಯಿಂದ ಸಂಜೆವರೆಗೆ ಜರುಗಿತು. ಈ ವೇಳೆ ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಉತ್ಸವ ಮೂರ್ತಿಗಳಿಗೆ ಧನ, ಧಾನ್ಯ ಸೇರಿದಂತೆ ಇನ್ನಿತರ ವಸ್ತುಗಳನ್ನು ಎಸೆದು ಪ್ರಾರ್ಥಿಸಿದರು. ಉಘೇ ಮಾದಪ್ಪ ಉಘೇ.. ಜೈ ಮಹತ್ ಮಲೆಯಾ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಭಕ್ತಿ ಭಾವವನ್ನು ಮೆರೆದರು.
ವಿವಿಧ ಸೇವೆಗಳಲ್ಲಿ ಭಾಗಿ
ಹರಕೆ ಹೊತ್ತ ಭಕ್ತರು ಮುಡಿಸೇವೆ, ಉರುಳುಸೇವೆ, ಪಂಜಿನಸೇವೆ ಹಾಗೂ ರಜಾ ಹೊಡೆಯುವ ಸೇವೆಯನ್ನು ಕೈಗೊಳ್ಳುವುದರ ಮೂಲಕ ಹರಕೆ ತೀರಿಸಿದರು. ಚಾಮರಾಜನಗರ ಸೇರಿದಂತೆ ಮೈಸೂರು, ಬೆಂಗಳೂರು, ಬಿಡದಿ, ರಾಮನಗರ, ಕನಕಪುರ, ಚನ್ನಪಟ್ಟಣ, ಮದ್ದೂರು, ಮಳವಳ್ಳಿ ಹಾಗೂ ಮಂಡ್ಯ ಕಡೆಗಳಿಂದ ಹೆಚ್ಚಿನ ಭಕ್ತರು ಆಗಮಿಸಿದ್ದರು. ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅನ್ನ ದಾಸೋಹ, ಕುಡಿಯುವ ನೀರು ಇನ್ನಿತರ ಅಗತ್ಯ ಸೌಕರ್ಯವನ್ನು ಒದಗಿಸಲಾಗಿತ್ತು. ಭಕ್ತರ ಸಂಖ್ಯೆಗೆ ಅನುಗುಣವಾಗಿ ಬಸ್ ಸೌಕರ್ಯ ಕಲ್ಪಿಸಲಾಗಿತ್ತು.