ಜಿಲ್ಲೆ

ನಾಲೆಗಳ ಹೂಳು ತೆಗೆಯುವಂತೆ ಒತ್ತಾಯ

ಹನೂರು: ತಾಲೂಕಿನ ಅಜ್ಜೀಪುರ ಸಮೀಪದ ಉಡುತೊರೆ ಜಲಾಶಯದ ನಾಲೆಗಳಲ್ಲಿ ಹೂಳು ಹಾಗೂ ಗಿಡಗಂಟಿಗಳನ್ನು ತೆರವುಗೊಳಿಸುವಂತೆ ಮಂಗಳವಾರ ತಾಲೂಕು ರೈತ ಸಂಘದ ಪದಾಧಿಕಾರಿಗಳು ಕಾವೇರಿ ನೀರಾವರಿ ನಿಗಮದ ಅಧಿಕಾರಿಗೆ ಮನವಿ ಸಲ್ಲಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಅಮ್ಜಾದ್‌ಖಾನ್ ಮಾತನಾಡಿ, ಅಜ್ಜೀಪುರ ಭಾಗದಲ್ಲಿ ನೂರಾರು ರೈತರು ಉಡುತೊರೆ ಜಲಾಶಯದ ನೀರು ನಂಬಿಕೊಂಡು ಕೃಷಿ ಮಾಡುತ್ತಿದ್ದಾರೆ. ಆದರೆ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಲ್ಲಿ ಹೂಳು ತುಂಬಿದ್ದು, ಗಿಡಗಂಟಿಗಳು ಬೆಳೆದಿವೆ. ಪರಿಣಾಮ ಜಮೀನುಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಇದರಿಂದ ತುಂಬಾ ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕಾಲುವೆಯಲ್ಲಿನ ಹೂಳು ಹಾಗೂ ಗಿಡಗಂಟಿಗಳನ್ನು ತೆರವುಗೊಳಿಸಬೇಕು. ಜತೆಗೆ ಜಲಾಶಯದಿಂದ ಕೆರೆಕಟ್ಟೆಗಳಿಗೆ ನೀರು ತುಂಬಿಸುವುದರ ಮೂಲಕ ಜಾನುವಾರು ಹಾಗೂ ರೈತರಿಗೆ ಅನುಕೂಲ ಕಲ್ಪಿಸಬೇಕು. ಇಲ್ಲವಾದಲ್ಲಿ ಜಾನುವಾರುಗಳೊಂದಿಗೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ, ತಾಲೂಕು ಸಂಘದ ಗೌರವಾಧ್ಯಕ್ಷ ರಾಜಣ್ಣ, ಉಪಾಧ್ಯಕ್ಷ ಪಳನಿಸ್ವಾಮಿ, ಗ್ರಾಮ ಘಟಕದ ಅಧ್ಯಕ್ಷರಾದ ಕಾಂಚಳ್ಳಿ ಬಸವರಾಜು, ಅಂಬಿಕಾಪುರದ ರುಹುಲ್ಲಾ, ಉಪಾಧ್ಯಕ್ಷ ವಿಜಯ್, ಪುದುನಗರದ ವೇಲುಸ್ವಾಮಿ ಇದ್ದರು.