ಚಾಮರಾಜನಗರ: ಮುಂಬರಲಿರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾಮರಸ್ಯದಿಂದ ಆಚರಿಸುವಂತಾಗಲೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಕ್ರೀದ್ ಹಬ್ಬವನ್ನು ಈ ಹಿಂದಿನ ವರ್ಷಗಳಲ್ಲಿ ಆಚರಿಸುತ್ತಿದ್ದ ರೀತಿಯಲ್ಲಿಯೇ ಈ ಬಾರಿಯೂ ಶಾಂತಿ, ಸೌಹಾರ್ದತೆಯಿಂದ ಆಚರಿಸಬೇಕು. ಹಬ್ಬಕ್ಕೆ ಪೂರ್ವಭಾವಿಯಾಗಿ ಕೈಗೊಳ್ಳಬೇಕಿರುವ ಸೌಲಭ್ಯಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗುವುದು ಎಂದರು.
ಸಭೆಯಲ್ಲಿ ಸಮುದಾಯದ ಮುಖಂಡರು ಮಾತನಾಡಿ, ಪ್ರಾರ್ಥನೆಗೆ ಹೆಚ್ಚಿನ ಬಾಂಧವರು ಸೇರುವುದರಿಂದ ಉಂಟಾಗಬಹುದಾದ ಸಂಚಾರ ದಟ್ಟಣೆ ಸುಗಮಗೊಳಿಸಲು ಏಕಮುಖ ಸಂಚಾರ ಇರಬೇಕು. ಮಾಂಸದ ತ್ಯಾಜ್ಯ ವಿಲೇವಾರಿಗೆ ಸೂಕ್ತ ಏರ್ಪಾಡು ಮಾಡಬೇಕು. ಹಬ್ಬದ ಹಿನ್ನೆಲೆಯಲ್ಲಿ ಕುಡಿಯುವ ನೀರು, ನಿರಂತರ ವಿದ್ಯುತ್ ಸರಬರಾಜು, ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬುದು ಸೇರಿದಂತೆ ಇನ್ನಿತರ ಸಲಹೆ ಅಭಿಪ್ರಾಯಗಳನ್ನು ನೀಡಿದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಪ್ರತಿಕ್ರಿಯಿಸಿ, ನಗರ, ಪಟ್ಟಣ ಸೇರಿದಂತೆ ವಿವಿಧೆಡೆ ಹಬ್ಬದ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ಸ್ವಚ್ಚತೆ ಕಾರ್ಯವನ್ನು ಆಗಿದ್ದಾಂಗೆ ಕೈಗೊಳ್ಳಬೇಕು. ನಿರಂತರ ವಿದ್ಯುತ್ ಪೂರೈಸಲು ಸಂಬಂಧಪಟ್ಟ ಇಲಾಖೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉದೇಶ ಅವರು ಹಬ್ಬದ ಪ್ರಾರ್ಥನೆ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಇನ್ನಿತರ ಕ್ರಮಗಳನ್ನು ಪೊಲೀಸ್ ಇಲಾಖೆಯಿಂದ ತೆಗೆದುಕೊಳ್ಳಲಾಗುವುದು ಎಂದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮೀ, ತಹಶೀಲ್ದಾರ್ ಬಸವರಾಜು, ಮಂಜುಳ, ನಗರಸಭೆ ಆಯುಕ್ತ ಎಸ್.ವಿ.ರಾಮದಾಸ್, ಚೂಡಾ ಅಧ್ಯಕ್ಷಮಹಮ್ಮದ್ ಅಸ್ಗರ್ ಮುನ್ನ, ನಗರಸಭಾ ಸದಸ್ಯರಾದ ಅಬ್ರಾರ್ ಅಹಮದ್, ಸಯ್ಯದ್ ರಫಿ, ಚಾ.ರಂ.ಶ್ರೀನಿವಾಸಗೌಡ ಹಾಗೂ ಇತರರು ಹಾಜರಿದ್ದರು.