ಜಿಲ್ಲೆ

ಜು.1 ರಂದು ಕರವೇ ವತಿಯಿಂದ ಪ್ರತಿಭಟನೆ

ಎ.ಎಸ್.ಮಣಿಕಂಠ

ಚಾಮರಾಜನಗರ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಜು.1 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಎಸ್.ನವೀನ್‌ಕುಮಾರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಪ್ರತಿಭಟನಾ ಧರಣಿಯನ್ನು ನಡೆಸಲಾಗುವುದು. ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ರ ಅನ್ವಯ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂಬ ಹಲವು ಹಕ್ಕೋತ್ತಾಯಗಳೊಂದಿಗೆ ಕರವೇ ರಾಜ್ಯಾಧ್ಯಕ್ಷರ ಸೂಚನೆಯಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ರಾಜ್ಯದ ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಇರುವ ಸಿ ಮತ್ತು ಡಿ ದರ್ಜೆಯ ಶೇ.100 ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಇನ್ನಿತರೆ ದರ್ಜೆಯ ಉದ್ಯೋಗದಲ್ಲಿ ಶೇ.80 ರಷ್ಟು ಮೀಸಲಿಡಬೇಕು. ಕರ್ನಾಟಕದಲ್ಲಿ ನೆಲೆಸಿದವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನಡೆಸಿ ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು. ಸರ್ಕಾರದ ನಿಯಮ ಪಾಲಿಸದ ಸಂಸ್ಥೆಗಳ ಮಾನ್ಯತೆಯನ್ನು ರದ್ದುಗೊಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸರ್ಕಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿ ನೀಡಬೇಕು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡಬೇಕು ಎಂಬ ಹಕ್ಕೋತ್ತಾಯಗಳನ್ನು ಸಲ್ಲಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ಕರವೇ ಉಪಾಧ್ಯಕ್ಷ ಮಂಜೇಶ್, ತಾಲೂಕು ಅಧ್ಯಕ್ಷ ಸುರೇಶ್ ನಾಯಕ್, ಪದಾಧಿಕಾರಿಗಳಾದ ಅನಂತ್‌ನಾಗ್, ಶ್ರೀನಿವಾಸ್ ಹಾಜರಿದ್ದರು.