ಜಿಲ್ಲೆ

ಬಾಬೂಜಿ ಸಾಧನೆ ಸ್ಮರಣೆ ಅಗತ್ಯ

ಚಾಮರಾಜನಗರ: ಶೋಷಿತ ಸಮುದಾಯದಲ್ಲಿ ಹುಟ್ಟಿ ಸಮಾಜದ ಎಲ್ಲ ವರ್ಗಗಳ ಉದ್ಧಾರಕ್ಕಾಗಿ ದುಡಿದ ಡಾ. ಬಾಬು ಜಗಜೀವನ ರಾಮ್ ಅವರ ಜೀವನ ಸಾಧನೆಗಳನ್ನು ಸ್ಮರಿಸುವುದು ಅಗತ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಭಾರತದ ಉಪ ಪ್ರಧಾನಿ, ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ ರಾಮ್ ಅವರ 38ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಬೂಜಿ ಅವರು ಒಂದು ವರ್ಗಕ್ಕೆ ಸೀಮಿತರಾದವರಲ್ಲ. ಬದಲಾಗಿ ಬಡವರು, ಶೋಷಿತರು, ದೀನದಲಿತರು ಸೇರಿದಂತೆ ಎಲ್ಲರ ಶ್ರೇಯೋಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕ. ಸ್ವಾತಂತ್ರ ಹೋರಾಟಗಾರರಾಗಿದ್ದ ಬಾಬೂಜಿ ಅವರು 78 ವರ್ಷಗಳ ಜೀವಿತಾವಧಿಯಲ್ಲಿ 50 ವರ್ಷಗಳನ್ನು ರಾಜಕಾರಣದಲ್ಲೇ ಕಳೆದು ಅನೇಕ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದರು ಎಂದು ಸ್ಮರಿಸಿದರು.

ತುರ್ತು ಪರಿಸ್ಥಿತಿ ಘೋಷಣೆಯಾದ ಸಂದರ್ಭದಲ್ಲಿ ಆಡಳಿತದ ಚುಕ್ಕಾಣಿ ಹಿಡಿದು ದೇಶವನ್ನು ಮುನ್ನಡೆಸಿದ ಕೀರ್ತಿ ಬಾಬೂಜಿ ಅವರಿಗೆ ಸಲ್ಲುತ್ತದೆ. ಆಹಾರ ಅಭಾವ ಉಂಟಾದಾಗ ಇತರ ದೇಶಗಳ ಆಹಾರ ಪರಿಸ್ಥಿತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಿ ಭಾರತ ಆಹಾರ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ನೆರವಾದರು ಎಂದು ತಿಳಿಸಿದರು.

ಮುಖಂಡ ಅರಕಲವಾಡಿ ನಾಗೇಂದ್ರ ಮಾತನಾಡಿ, ಡಾ.ಬಾಬು ಜಗಜೀವನ ರಾಮ್ ಅವರ ಪುಣ್ಯಸ್ಮರಣೆ ರಾಜ್ಯ ಸರ್ಕಾರದಿಂದ ಆಚರಿಸುತ್ತಿರುವುದು ಶ್ಲಾಘನೀಯ. ದೇಶದಲ್ಲಿ ಜಾತೀಯ ವ್ಯವಸ್ಥೆ ಅತ್ಯಂತ ಕ್ರೂರವಾಗಿದ್ದ ಕಾಲಘಟ್ಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ ರಾಮ್ ಅವರು ತಮಗಾದ ನೋವು, ಯಾತನೆಗಳನ್ನು ಮರೆತು ಸಮಾಜ ಸುಧಾರಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟರು ಎಂದರು.

ಮುಖಂಡ ಜವರಯ್ಯ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ ರಾಮ್ ಅವರು ದೇಶದ ಎರಡು ಕಣ್ಮಣಿಗಳಿದ್ದಂತೆ. ತಳ ಸಮುದಾಯದ ಒಳಿತಿಗೆ ಶ್ರಮಿಸಿದ ಈ ಇಬ್ಬರೂ ನಾಯಕರ ಪುಣ್ಯಸ್ಮರಣೆ ಮಾಡಿದರೆ ಮಾತ್ರ ಸಾಲದು. ಬದಲಾಗಿ ಅವರ ಚಿಂತನೆ, ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಬೇಕು. ಅವರು ಹಾಕಿಕೊಟ್ಟ ಹಾದಿಯಲ್ಲಿ ಮುನ್ನೆಡೆಯಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪ ಕಾರ್ಯದರ್ಶಿ ಪಿ.ಲಕ್ಷ್ಮೀ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜು, ತಾಲೂಕು ಸಮಾಜ ಕಲ್ಯಾಣಾಧಿಕಾರಿ ನಂಜುಂಡೇಗೌಡ, ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಆರಂಭದಲ್ಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಾಬೂಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.