ಚಾಮರಾಜನಗರ: ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕರ್ನಾಟಕವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಖಾಲಿ ಚೊಂಬು ಪ್ರದರ್ಶನ ಮಾಡುವ ಮೂಲಕ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ಧರಣಿ ನಡೆಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ರಾಜ್ಯಕ್ಕೆ ಯಾವುದೇ ಅನುದಾನ ನೀಡದೆ ತಾರತಮ್ಯ ಮಾಡಲಾಗಿದೆ. ರಾಜ್ಯವನ್ನು ಪ್ರತಿನಿಧಿಸುವ ಐದು ಮಂತ್ರಿಗಳಿದ್ದರೂ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ಇದೊಂದು ಬಿಹಾರ ಮತ್ತು ಆಂಧ್ರಪ್ರದೇಶದ ಬಜೆಟ್ ಆಗಿದೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲತಾ ರಾಜಶೇಖರ್ ಜತ್ತಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕ ಮಹದೇವ್, ಆರ್.ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುಸ್ವಾಮಿ, ಮುಕುಂದ ವರ್ಮ, ಎಪಿಎಂಸಿ ಅಧ್ಯಕ್ಷ ಮಹದೇವಸ್ವಾಮಿ, ಎಪಿಎಂಪಿ ಸದಸ್ಯ ಪ್ರದೀಪ್, ನಾಗೇಂದ್ರ, ಯುವ ಮುಖಂಡ ನಾಗೇಂದ್ರ ನಾಯಕ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಮೋಹನ್ (ನಗು), ಮಾಧ್ಯಮ ಕಾರ್ಯದರ್ಶಿ ಗೌಡಹಳ್ಳಿ ರಾಜೇಶ್, ಜಿ.ಎನ್ ಲೋಕೇಶ್, ಮಧು ಇತರರು ಭಾಗವಹಿಸಿದ್ದರು.