ಜಿಲ್ಲೆ

ಜು.28 ರಂದು ರಜತ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮ

ಚಾಮರಾಜನಗರ: ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಜತ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮವನ್ನು ಜು.28 ರಂದು ಆಯೋಜಿಸಲಾಗಿದೆ ಎಂದು ಬಸವೇಶ್ವರ ಪತ್ತಿನ ಸಹಕಾರ ಸಂಘದ ಜಿಲ್ಲಾಧ್ಯಕ್ಷ ಎಂ.ಗೌರಿಶಂಕರ್ ತಿಳಿಸಿದರು.

ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಶ್ರೀಸಿದ್ದಮಲ್ಲೇಶ್ವರ ವಿರಕ್ತ ಮಠದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮರಿಯಾಲ ಮಠದ ಶ್ರೀ ಇಮ್ಮಡಿ ಮುರುಘ ರಾಜೇಂದ್ರ ಸ್ವಾಮೀಜಿ ಹಾಗೂ ವಿರಕ್ತ ಮಠದ ಚನ್ನಬಸವಸ್ವಾಮೀಜಿ ಅವರು ವಹಿಸಲಿದ್ದಾರೆ. ಮೈಸೂರು ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ಡಾ.ಡಿ.ಎಸ್.ಗುರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಿದ್ದಮಲ್ಲಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ 25 ವರ್ಷಗಳು ತುಂಬುತ್ತಿರುವುದರ ಅಂಗವಾಗಿ ಬೆಳ್ಳಿ ಬೆಡಗು ಸಂಭ್ರಮಾಚರಣೆಯನ್ನು ಆಚರಿಸಲಾಗುತ್ತಿದೆ. ಇದರ ಪ್ರಯುಕ್ತ ವರ್ಷಪೂರ್ತಿ ನಾನಾ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಸಿದ್ದಮಲ್ಲಪ್ಪ, ಉಪಾಧ್ಯಕ್ಷ ಎನ್.ಮಹದೇವಸ್ವಾಮಿ, ಜಂಟಿ ಕ್ರಿಯಾಸಮಿತಿ ಅಧ್ಯಕ್ಷ ದುಂಡುಮಾದಪ್ಪ, ಸಂಗಮ ಗೃಹ ನಿರ್ಮಾಣ ಸಹಕಾರ ಸಂಘದ ಉಪಾಧ್ಯಕ್ಷ ಎಂ.ಸುಂದರ್, ಬಸವೇಶ್ವರ ಪತ್ತಿನ ಸಹಕಾರ ಸಂಘದ ನಿರ್ದೇಶಕ ಕೆ.ಎಸ್.ಮಹದೇವಸ್ವಾಮಿ ಹಾಜರಿದ್ದರು.