ಚಾಮರಾಜನಗರ: ಮುಖ್ಯ ಶಿಕ್ಷಕರು ಹಾಗೂ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡುವುದು ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮುಂಭಾಗ ಜಮಾಯಿಸಿದ ಪ್ರಾಥಮಿಕ ಶಾಲಾ ಶಿಕ್ಷಕರು ಭಿತ್ತಿ ಪತ್ರಗಳನ್ನು ಹಿಡಿದು, ವಿವಿಧ ೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕ್ಷೇತ್ರಶಿಕ್ಷಣಾಧಿಕಾರಿ ಹನುಮಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ ಮಾತನಾಡಿ, ಕಳೆದ 6-7 ವರ್ಷಗಳಿಂದ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅಳವಡಿಸಿರುವ ಅವೈಜ್ಞಾನಿಕ ಅಂಶಗಳಿಂದ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾ ನಿರತ ಪದವೀಧರ ಶಿಕ್ಷಕರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಈ ಬಗ್ಗೆ ಎಷ್ಟೇಬಾರಿ ಮನವಿ ಮಾಡಿದ್ದರೂ ಸರ್ಕಾರ ಸ್ಪಂದಿಸದೇ ಇರುವುದರಿಂದ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಶಿಕ್ಷಕರು ಬೀದಿಗಿಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಂತೆ ಆ.12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
2017ರ ಹೊಸವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು. ಪ್ರಾಥಮಿಕ ಶಾಲಾ ಶಿಕ್ಷಕರ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಪದವಿ ಪೂರೈಸಿದ ಶಿಕ್ಷಕರನ್ನು ಸೇವಾ ಜೇಷ್ಠತೆಯೊಂದಿಗೆ ಪದವೀಧರ ಶಿಕ್ಷಕರೆಂದು ಪದನಾಮೀಕರಿಸಬೇಕು. ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016 ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿನೀಡಬೇಕು. 2016 ರ ಪೂರ್ವದಂತೆ ಮುಖ್ಯ ಶಿಕ್ಷಕರು ಹಾಗೂ ಹಿರಿಯ ಮುಖ್ಯಶಿಕ್ಷಕರ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಶಶಿಕಲಾ,
ಪ್ರಧಾನ ಕಾರ್ಯದರ್ಶಿ ಸುಧಾ, ಸದಸ್ಯರಾದ ಮಹಾದೇವಸ್ವಾಮಿ, ಎಸ್.ನಟರಾಜು, ಮಹಾದೇವಸ್ವಾಮಿ, ಸಿ.ಮಲ್ಲಿಕಾರ್ಜುನ್, ಸಿ.ಮಹಾದೇವಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಾದಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವಸ್ವಾಮಿ, ಕೃಷ್ಣಮೂರ್ತಿ, ಸಿದ್ದಲಿಂಗಮೂರ್ತಿ, ನಂಜುಂಡಸ್ವಾಮಿ, ಸುಶೀಲಾ. ಮಹೇಶ್ ಹಾಗೂ ಇತರರು ಭಾಗವಹಿಸಿದ್ದರು.