ಜಿಲ್ಲೆ

ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ

ಎ.ಎಸ್.ಮಣಿಕಂಠ

ಚಾಮರಾಜನಗರ: ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಪಡೆದುಕೊಳ್ಳಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕುಮಾರ್ ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಿಂದುಳಿದ ವರ್ಗಗಳ ನೇತಾರ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ 109ನೇ ಜನ್ಮ ದಿನಚಾರಣೆ ಅಂಗವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಭಾನುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಹಸಿರು ಬಾವುಟ ಬೀಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮದ ಅಂಗವಾಗಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಇದರಲ್ಲಿ 100, 200ಮೀಟರ್ ಓಟ, ಉದ್ದ ಹಾಗೂ ಎತ್ತರ ಜಿಗಿತ, ಗುಂಡು ಎಸೆತ ಸ್ಪರ್ಧೆಗಳನ್ನು ನಡೆಸಲಾಗುತ್ತಿದ್ದು, ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ದಿನದಂದು ಬಹುಮಾನ ವಿತರಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಿಂಗರಾಜು, ನಿಲಯಪಾಲಕ ಲಿಂಗಣ್ಣ, ಎಚ್.ಬಿ.ಸ್ವಾಮಿ, ಅಶ್ವಥ್, ಮಂಜುನಾಥ್, ಚಿನ್ನಸ್ವಾಮಿ, ಯುವ ಸ್ಪಂದನಾ ಕೇಂದ್ರದ ಗುರುರಾಜ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.