ಚಾಮರಾಜನಗರ: ನಾಡಹಬ್ಬ ಮೈಸೂರು ದಸರಾ ಭಾಗವಾಗಿ ಜಿಲ್ಲೆಯಲ್ಲೂ ನಡೆಯುವ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಮುಖ ವೃತ್ತ ಸ್ಥಳಗಳಲ್ಲಿ ದೀಪಾಲಂಕಾರದೊಂದಿಗೆ ಸೆಲ್ಫಿ ಪಾಯಿಂಟ್ ಸ್ಥಾಪಿಸಿ ದಸರಾಗೆ ಮತ್ತಷ್ಟು ಮೆರುಗು ನೀಡಲು ಚಿಂತನೆ ನಡೆಸಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಕಲಾವಿದರು, ಅಧಿಕಾರಿಗಳನ್ನೊಳಗೊಂಡ ದಸರಾ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಅ.7ರಿಂದ 9ರವರೆಗೆ ದಸರಾ ಹಬ್ಬವನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಸಂಘ, ಸಂಸ್ಥೆಗಳ ಮುಖಂಡರು, ಕಲಾವಿದರು ದೀಪಾಲಂಕಾರವನ್ನು ವ್ಯಾಪಕವಾಗಿ ಪಟ್ಟಣದಲ್ಲಿ ಮಾಡಬೇಕು. ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಬೇಕು. ರಾಜ್ಯಮಟ್ಟದಲ್ಲಿ ಹೆಸರು ಮಾಡಿರುವ ಜಿಲ್ಲೆಯ ಕಲಾವಿದರು ಹಾಗೂ ಇನ್ನಿತರ ಕಲಾವಿದರನ್ನು ಆಹ್ವಾನಿಸಿ ಕಾರ್ಯಕ್ರಮ ಆಯೋಜಿಸಬೇಕು. ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುವ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಬೇಕು. ಜಿಲ್ಲೆಯ ಕ್ರೀಡಾ ಸಾಧಕರನ್ನು ಸನ್ಮಾನಿಸಬೇಕು. ಬೊಂಬೆ ಕೂರಿಸುವುದು, ಸಂವಿಧಾನ ಜಾಗೃತಿಯಂತಹ ಕಾರ್ಯಕ್ರಮಗಳು, ಜನಪದ, ರಂಗಗೀತೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಬೇಕು. ಜನನಮಂಟಪವನ್ನು ಸ್ವಚ್ಛಗೊಳಿಸಬೇಕೆಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ಸಾಂಪ್ರದಾಯಿಕ ಗಜಪೂಜೆ ಮೆರವಣಿಗೆಗೆ ಚಿಂತನೆ ನಡೆಸಲಾಗಿದ್ದು, ಅರಣ್ಯ ಇಲಾಖೆ ಹಾಗೂ ಇನ್ನಿತರ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಲಾಗುತ್ತಿದೆ. ಮಕ್ಕಳ ಪೌಷ್ಟಿಕತೆ ಕುರಿತು ಜಾಗೃತಿ ಮೂಡಿಸಲು ಈ ಬಾರಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಸ್ಥಳೀಯ ಕಲಾವಿದರಿಗೂ ಪ್ರಾಶಸ್ತ್ಯ ನೀಡಲಿದ್ದು, ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಂಭ್ರಮ ಶೀರ್ಷಿಕೆಯಡಿ ಕಾರ್ಯಕ್ರಮ ನೀಡಲು ಅವಕಾಶ ಮಾಡಿಕೊಡಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್, ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು, ಕಲಾವಿದರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.