ಜಿಲ್ಲೆ

ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ

ಎ.ಎಸ್.ಮಣಿಕಂಠ

ಚಾಮರಾಜನಗರ: ರಾಜ್ಯಪಾಲರ ಮೇಲೆ ಕಾಂಗ್ರೆಸ್ ನಾಯಕರ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಗೂ ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿಯಾಗಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಲ್ಲಿಂದ ಮೆರವಣಿಗೆ ಮೂಲಕ ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ, ಮಾನವ ಸರಪಳಿ ನಿರ್ಮಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ತಡೆದು ಕೆಲಕಾಲ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 3.16 ಎಕರೆ ಜಮೀನು ಆದಿ ಕರ್ನಾಟಕ ಜನಾಂಗದವರಿಗೆ ಸೇರಿದ್ದಾಗಿದೆ. ಆದರೆ ಕಾನೂನನ್ನು ದುರುಪಯೋಗಪಡಿಸಿಕೊಂಡು ಜಮೀನನ್ನು ಖರೀದಿ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಷ್ಟು ಜಮೀನನ್ನು ವಾಪಸ್ ನೀಡುವ ಮೂಲಕ ನಾನು ದಲಿತರಪರ ಎಂದು ಹೇಳಿಕೊಳ್ಳುವುದನ್ನು ಸಾಬೀತು ಮಾಡಬೇಕು ಎಂದು ಸವಾಲು ಹಾಕಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಮೇಲೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ವಿರೋಧ ಮಾಡುತ್ತಿರುವ ಕಾಂಗ್ರೆಸ್ ನಾಯಕರ ನಡೆ ಖಂಡನೀಯವಾಗಿದೆ. ಆಡಳಿತ ಪಕ್ಷವನ್ನು ಆಯ್ಕೆ ಮಾಡುವಂತೆಯೇ, ಜನರೇ ವಿರೋಧ ಪಕ್ಷವನ್ನು ಆಯ್ಕೆ ಮಾಡುತ್ತಾರೆ. ಆಡಳಿತ ಸರ್ಕಾರದ ಭ್ರಷ್ಟಚಾರವನ್ನು ಖಂಡಿಸುವುದು ವಿರೋಧ ಪಕ್ಷದ ಕೆಲಸವಾಗಿದೆ. ಕಾಂಗ್ರೆಸ್ ಈ ಪ್ರಕರಣದಲ್ಲಿ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಪರವಾಗಿ ಹೋರಾಟ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಸಂವಿಧಾನ ವಿರೋಧಿಯಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಾಜ್ಯ ಪಾಲರು ದಲಿತರು ಎಂಬ ಕಾರಣಕ್ಕೆ ಅವರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಕ್ತಕ್ರಾಂತಿಯಾಗುತ್ತದೆ, ಬಾಂಗ್ಲಾ ದೇಶದಲ್ಲಿ ಆದಂತೆ ರಾಜ್ಯದಲ್ಲಿ ಕ್ರಾಂತಿಯಾಗುತ್ತದೆ ಎಂಬ ಹೇಳಿಕೆಯನ್ನು ನೀಡುತ್ತಿರುವ ಕಾಂಗ್ರೆಸ್ ನಾಯಕರ ಮೇಲೆ ಪೊಲೀಸರು ಸುಮೋಟೋ ಪ್ರಕರಣಗಳನ್ನು ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರನ್ನು ಕಾಂಗ್ರೆಸ್ ನಾಯಕರು ಅವಾಚ್ಯ ಶಬ್ಧಗಳಿಂದ ನಿಂಧಿಸುವ ಮೂಲಕ ಸಂವಿಧಾನಕ್ಕೆ ಅಗೌರವ ತೋರಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೋರಾಟದ ಹೆಸರಿನಲ್ಲಿ ತಮ್ಮ ಭ್ರಷ್ಟಚಾರವನ್ನು ಸಮರ್ಥಿಸಿಕೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಸಂವಿಧಾನ ವಿರೋಧಿ ಹೇಳಿಕ್ಕೆಯನ್ನು ನೀಡುತ್ತಿದ್ದು, ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಸ್.ಬಾಲರಾಜ್, ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ಹನೂರು ವೆಂಕಟೇಶ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಸುಂದರ್, ಮೂಡ್ನಕೂಡು ಪ್ರಕಾಶ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಸೂರ್ಯಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ, ನಗರಸಭಾ ಸದಸ್ಯರಾದ ಸುದರ್ಶನ್ ಗೌಡ, ಚಂದ್ರಶೇಖರ್, ಮಂಗಲ ಶಿವಕುಮಾರ್, ಮಂಜುನಾಥ್ ಹಾಗೂ ಇತರರು ಭಾಗವಹಿಸಿದ್ದರು.