ಚಾಮರಾಜನಗರ: ಸುಳ್ವಾಡಿ ವಿಷಪ್ರಾಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥರಿಗೆ ಆದಷ್ಟು ಬೇಗ ನಿವೇಶನ ಹಾಗೂ ಜಮೀನು ಮಂಜೂರು ಮಾಡಬೇಕು ಹಾಗೂ ಎಸ್ಸಿ/ಎಸ್ಟಿ ಸಮುದಾಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ದಲಿತ ಮುಖಂಡರು ಒತ್ತಾಯಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕಡಿಪಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿತರಕ್ಷಣಾ ಸಮಿತಿ ಸಭೆಯಲ್ಲಿ ದಲಿತ ಮುಖಂಡ ಅರಕಲವಾಡಿ ನಾಗೇಂದ್ರ ಮಾತನಾಡಿ, ಸುಳ್ವಾಡಿ ಕಿಚ್ಚಗುತ್ತಿ ಮಾರಮ್ಮ ದೇವಾಲಯದ ವಿಷಪ್ರಾಶನ ಪ್ರಕರಣ ನಡೆದು ಸುಮಾರು 6-7 ವರ್ಷಗಳು ಕಳೆದಿದ್ದರೂ, ಇಂದಿಗೂ ಸಂತ್ರಸ್ಥರಿಗೆ ಸೂಕ್ತ ಪರಿಹಾರವನ್ನು ನೀಡಿಲ್ಲ. ಅವರಿಗೆ ನಿವೇಶನ ಮತ್ತು ಜಮೀನು ನೀಡುವ ಭರವಸೆ ಹಾಗೆಯೇ ಉಳಿದಿದೆ ಎಂದು ಹೇಳಿದರು.
ಹನೂರು ತಾಲೂಕಿನ ಹೂಗ್ಯಂ ಹಾಗೂ ಇನ್ನಿತರೆ ಗ್ರಾಮಗಳಲ್ಲಿ ಇಂದಿಗೂ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. 2013-14 ರಲ್ಲಿ ಭೀಮನವೀಡು ಗ್ರಾಮದಲ್ಲಿ ನಡೆದಿದ್ದ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ಥರಿಗೆ ಜಿಲ್ಲಾಡಳಿತ ಸೌಲಭ್ಯ ಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ಆದರೇ ಯಾವ ಸೌಲಭ್ಯಗಳನ್ನು ನೀಡಿಲ್ಲ. ಜಿಲ್ಲಾಡಳಿತವನ್ನೇ ವಂಚಿಸುವ ತಳಮಟ್ಟದ ಅಧಿಕಾರಿಗಳಿಂದ ದಲಿತರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ಜೋಡಿಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರ ಒದಗಿಸಬೇಕಾಗಿದ್ದ ಅಧಿಕಾರಿಗಳ ಉದಾಸೀನತೆಯಿಂದ ಪ್ರಕರಣ ಖುಲಾಸೆಯಾಗಿದೆ ಎಂದು ದೂರಿದರು.
ದಲಿತ ಮುಖಂಡ ದೊಡ್ಡಿಂದವಾಡಿ ಸಿದ್ದರಾಜು ಮಾತನಾಡಿ, ಎಂ.ಜಿ.ದೊಡ್ಡಿ ಗ್ರಾಮದಲ್ಲಿ ಸುಮಾರು 25-30 ಜನರು ಸುಳ್ವಾಡಿ ಸಂತ್ರಸ್ತರಿದ್ದಾರೆ. ಹಿಂದಿನ ಜಿಲ್ಲಾಧಿಕಾರಿಗಳು ಸರ್ವೇ ನಂ.934 ರಲ್ಲಿ ನಿವೇಶನಕ್ಕಾಗಿ ಸ್ಥಳ ಗುರುತು ಮಾಡಿದ್ದರು. ಗ್ರಾ.ಪಂ ಅಧಿಕಾರಿಗಳು 10 ವರ್ಷಗಳ ಹಿಂದೆಯೇ ನಿವೇಶನ ಕೊಟ್ಟಿದ್ದೇವೆ ಎಂದು ಅಧಿಕಾರಿಗಳನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸಂತ್ರಸ್ಥರಿಗೆ ಆದಷ್ಟು ಬೇಗ ನಿವೇಶನ ಮತ್ತು ಜಮೀನನ್ನು ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರತಿಕ್ರಿಯಿಸಿ, ಸುಳ್ವಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಸಂತ್ರಸ್ಥರಿಗೆ ಆಹಾರ ಕಿಟ್ ವಿತರಣೆ ಮಾಡಲಾಗುತ್ತಿದೆ. ಈ ಪ್ರಕರಣದ ಸಂತ್ರಸ್ಥರಿಗೆ ಜಮೀನು ನೀಡುವ ವಿಚಾರದಲ್ಲಿ ಶೀಘ್ರವಾಗಿ ಕ್ರಮವಹಿಸಲಾಗುವುದು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಬಿಂದ್ಯಾ ಹಾಗೂ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.