ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ನಡೆಯುವ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆಯಾಗಿದೆ ಎಂದು ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶನ ಎಸ್.ನಟರಾಜ್ ಹೇಳಿದರು.
ತಾಲೂಕಿನ ಉಮ್ಮತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ 2024-25ನೇ ಸಾಲಿನ ಉಮ್ಮತ್ತೂರು ಕ್ಲಸ್ಟರ್ ವ್ಯಾಪ್ತಿಯ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರವು ವಿದ್ಯಾರ್ಥಿಗಳಿಗೆ ಪಠ್ಯದ ತೆಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ನೀಡುವ ಮೂಲಕ ಮಕ್ಕಳಲ್ಲಿ ಇರುವ ಸುಪ್ತ ಪ್ರತಿಭೆಯನ್ನು ಹೊರ ಹಾಕುವ ಅವಕಾಶ ಕಲ್ಪಿಸಿದೆ. ಈ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಿಗುವ ಅವಕಾಶಗಳನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಿಕ್ಷಕರ ಸಂಘವು ಶಿಕ್ಷಕರ ಸಮಸ್ಯೆಗಳಿಗೆ ಯಾವಾಗಲೂ ಬೆಂಬಲವಾಗಿ ನಿಲ್ಲುತ್ತದೆ. ಅದರಂತೆ ಶಿಕ್ಷಕರು ಕೂಡ ಸಂಘದ ಜತೆಗೆ ಅವನಾಭಾವ ಸಂಬಂಧವನ್ನು ಹೊಂದಿರಬೇಕು. ಶಾಲೆ, ಮಕ್ಕಳು ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಶಿಕ್ಷಕರ ಸಂಘ ದನಿಯಾಗಿರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ವಿಜಯ್ ಕುಮಾರ್, ಉಮ್ಮತ್ತೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಾ, ಶಾಲೆಯ ಪ್ರಾಂಶುಪಾಲ ಗುರುಪ್ರಸಾದ್, ಮುಖ್ಯ ಶಿಕ್ಷಕ ಕುಮಾರಸ್ವಾಮಿ, ಮಹದೇವು, ಸುರೇಶ್, ನಾಗೇಶ್ ಹಾಗೂ ಇತರರು ಭಾಗವಹಿಸಿದ್ದರು.