ಚಾಮರಾಜನಗರ: ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಸ್ಥಿರಾಸ್ತಿಗಳ ನೊಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೊಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ಸೆಪ್ಟೆಂಬರ್ 9ರಿಂದ ಸಂಯೋಜಿಸಿ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.
ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆಗೊಳಿಸಲು ನಗರಾಭಿವೃದ್ಧಿ ಇಲಾಖೆಯು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇದೇ ತಿಂಗಳ 9ರಿಂದ ಜಿಲ್ಲೆಯ ಎಲ್ಲಾ ಉಪನೊಂದಣಿ ಕಚೇರಿಗಳಲ್ಲಿ ನಗರ, ಸ್ಥಳೀಯ ಸಂಸ್ಥೆೆಗಳ ಆಸ್ತಿಯನ್ನು ನೊಂದಾಯಿಸಲು ಆಸ್ತಿಯ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಿಂದ ಪಡೆದು ನೊಂದಣಿ ಮಾಡಲಾಗುತ್ತದೆ. ಸಾರ್ವಜನಿಕರು ತಮ್ಮ ಆಸ್ತಿ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ನಮೂದಿಸಿ ಉತಾರೆ ಪಡೆಯಬಹುದಾಗಿದೆ.
ಕೃಷಿ ಜಮೀನಿನ ನೊಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006ರೊಂದಲೇ ನೊಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ. ಜಮೀನಿನ ಸರ್ವೆ, ನಕ್ಷೆ (ಸ್ಕೆಚ್)-ನಮೂನೆ 11ಇ ಮೋಜಣಿ ತಂತ್ರಾಂಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಾಸ್ತಾವೇಜುಗಳ ನೊಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು ಸಂಯೋಜನೆಗೊಳಿಸಲಾಗಿದೆ.
ಈ ಮೇಲ್ಕಾಣಿಸಿದ ಆಸ್ತಿಗಳನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳ ಸಂಬಂಧ ಇ-ಆಸ್ತಿ ತಂತ್ರಾಂಶವನ್ನು ರೂಪಿಸಲಾಗಿದೆ. ಇ-ಆಸ್ತಿ ತಂತ್ರಾಂಶವನ್ನು ನೊಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಹಾಗೂ ಕನಕಪುರ ಸ್ಥಳೀಯ ಸಂಸ್ಥೆಗಳ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ 2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನುಜಾರಿಗೊಳಿಸಿ ಯಶಸ್ವಿಯಾಗಿದೆ.
ಇ-ಆಸ್ತಿ ತಂತ್ರಾಂಶವನ್ನು ಕಾವೇರಿ 2.0 ತಂತ್ರಾಂಶದೊಂದಿಗೆ ಜಾರಿಗೊಳಿಸಿ ಆಸ್ತಿ ನೊಂದಣಿ ಮಾಡುವ ನಿಟ್ಟಿನಲ್ಲಿ ಸೆಪ್ಟೆಂಬರ್ 9ರಿಂದ ಚಾಮರಾಜನಗರ ಜಿಲ್ಲೆಯಲ್ಲಿಯೂ ಇ-ಆಸ್ತಿ ನೊಂದಣಿಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.