ಜಿಲ್ಲೆ

ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ

ಚಾಮರಾಜನಗರ : ಆರೋಗ್ಯದ ಹಿತದೃಷ್ಟಿಯಿಂದ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಅಭಿಪ್ರಾಯಪಟ್ಟರು.

ನಗರದ ಜೆಎಸ್‌ಎಸ್ ಮಹಿಳಾ ಕಾಲೇಜು ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನೆಹರು ಯುವ ಕೇಂದ್ರ, ಶ್ರೀವರಮಹಾಲಕ್ಷ್ಮೀ ಕ್ರೀಡಾ ಸೇವಾ ಸಂಸ್ಥೆ, ಜಿಲ್ಲಾ ವಕೀಲರ ಸಂಘ ಹಾಗೂ ಜೆಎಸ್‌ಎಸ್ ಮಹಿಳಾ ಕಾಲೇಜು ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯದ ಹಿತದೃಷ್ಟಿಯಿಂದ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸ್ವಚ್ಛತೆ ಎನ್ನುವುದು ಯಾರೋ ಒಬ್ಬರಿಗೆ ಅಥವಾ ಯಾವುದೋ ಒಂದು ವರ್ಗಕ್ಕೆ ಸೀಮಿತವಾದ ಕಾರ್ಯವಲ್ಲ. ಅದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆಗ ಮಾತ್ರ ಗಾಂಧೀಜಿ ಅವರ ಸ್ವಚ್ಛತಾ ಆಂದೋಲನದ ಕನಸಿಗೆ ಸಮರ್ಥ ಅರ್ಥ ಸಿಕ್ಕಂತಾಗುತ್ತದೆ ಎಂದರು.

ಪರಿಸರ ಮಾಲಿನ್ಯದಿಂದ ಸಾಕಷ್ಟು ರೋಗರುಜಿನಗಳು ಉಂಟಾಗುತ್ತದೆ. ಈ ಬಗ್ಗೆ ಸಾರ್ವಜನಿಕರು ಜಾಗೃತಿ ವಹಿಸಬೇಕಾಗಿದೆ. ಪ್ರತಿಯೊಬ್ಬರೂ ಮರಗಿಡಗಳನ್ನು ಬೆಳೆಸುವ ಮೂಲಕ ಪರಿಸರವನ್ನು ಉತ್ತಮವಾಗಿಡಬೇಕು. ಪರಿಸರ ಉತ್ತಮವಾಗಿದ್ದರೆ, ಎಲ್ಲರ ಆರೋಗ್ಯವೂ ಸಮತೋಲನದಲ್ಲಿ ಇರುತ್ತದೆ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ನಂಜಯ್ಯ ಮಾತನಾಡಿ, ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಮತ್ತು ನೈರ್ಮಲ್ಯದಿಂದ ಇಟ್ಟುಕೊಳ್ಳಬೇಕು. ಇದು ಮನಸ್ಸಿನಲ್ಲಿ ಒಳ್ಳೆಯ ಮತ್ತು ಸಕಾರಾತ್ಮಕ ಆಲೋಚನೆಗಳನ್ನು ತರುತ್ತದೆ. ಇದು ರೋಗಗಳ ಹರಡುವುದನ್ನು ತಡೆಗಟ್ಟುತ್ತದೆ ಎಂದರು.

ಬಾಲ ನ್ಯಾಯ ಮಂಡಳಿ ಸದಸ್ಯ ಟಿ.ಜೆ.ಸುರೇಶ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಸಂಸ್ಕಾರ ಮತ್ತು ಒಳ್ಳೆಯ ಸ್ವಭಾವ ಹೊಂದಿರಬೇಕು. ಈ ಮೂಲಕ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಶ್ರೀ ವರಮಹಾಲಕ್ಷ್ಮೀ ಕ್ರೀಡಾ ಸೇವಾ ಸಂಸ್ಥೆ ಅಧ್ಯಕ್ಷ ಜಿ.ಬಂಗಾರು, ಜೆಎಸ್‌ಎಸ್ ಕಾಲೇಜಿನ ಪ್ರಾಂಶುಪಾಲ ಡಾ.ಮಹದೇವಸ್ವಾಮಿ, ನೆಹರು ಯುವ ಕೇಂದ್ರದ ಸಹನಾ, ಎನ್‌ಎಸ್‌ಎಸ್ ಸಂಯೋಜಕ ಮಹೇಶ್, ವಿದ್ಯಾರ್ಥಿನಿ ಸಂಘದ ಉಪಾಧ್ಯಕ್ಷೆ ಪುಷ್ಪಾ, ವಿದ್ಯಾರ್ಥಿ ಶಿವಮ್ಮ, ಗೀತಾ ಹಾಗೂ ಇತರರು ಇದ್ದರು.