ಜಿಲ್ಲೆ

20ರಂದು ಭೀಮ ಸಂಕಲ್ಪ ಸಮಾವೇಶ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಸಂವಿಧಾನ ಉಳಿವಿಗಾಗಿ ಆ.20ರಂದು ಭೀಮ ಸಂಕಲ್ಪ ಸಮಾವೇಶ ಹಾಗೂ ನೂತನ ಸಚಿವರು, ಶಾಸಕರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಕೆ.ಎಂ.ನಾಗರಾಜು ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಸಮಾವೇಶವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸುವರು. ತಿ.ನರಸೀಪುರ ನಳಂದ ಬುದ್ಧ ವಿಹಾರದ ಬೋಧಿರತ್ನ ಬಂತೇಜಿ ಮತ್ತು ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವರು. ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ‘ನೊಂದವರ ಧ್ವನಿ’ ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್ ಪ್ರಸಾದ್, ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕಾನಾಥ್ ಹಾಗೂ ಮಾನವ ಬಂಧುತ್ವ ವೇದಿಕೆ ವಿಭಾಗೀಯ ಸಂಚಾಲಕಿ ಡಾ.ಲೀಲಾ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ನಗರಸಭೆ ಮಾಜಿ ಅಧ್ಯಕ್ಷ ಎಸ್.ನಂಜುಂಡಸ್ವಾಮಿ, ದಲಿತ ಮಹಾಸಭಾ ಅಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು), ಮುಖಂಡ ಓಲೆ ಮಹಾದೇವು ಹಾಗೂ ಸಾಹಿತಿ ದೊಡ್ಡರಾಯಪೇಟೆ ಸಿದ್ದರಾಜು, ನಿವೃತ್ತ ಎಎಸ್‌ಐ ಸಿದ್ದರಾಜು ಅವರನ್ನು ಸನ್ಮಾನಿಸಲಾಗುವುದು ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ.ಮಂಜುನಾಥ್, ಸಿ.ಎಂ.ಶಿವಣ್ಣ, ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಸುಭಾಷ್ ಮಾಡ್ರಳ್ಳಿ, ಸಾಹಿತಿ ದೊಡ್ಡರಾಯಪೇಟೆ ಸಿದ್ದರಾಜು, ನಾಗಣ್ಣ, ರಾಮಸಮುದ್ರ ಸಿದ್ದರಾಜು, ಕೃಷ್ಣಮೂರ್ತಿ ಹಾಜರಿದ್ದರು.