ಚಾಮರಾಜನಗರ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆ, ಸರ್ಕಾರಿ ಜಾಗಗಳನ್ನು ಗುರುತಿಸಿ ಅವುಗಳ ತೆರವಿಗೆ ಕ್ರಮವಹಿಸುವಂತೆ ಸಹಕಾರ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒತ್ತುವರಿ ಸ್ಥಳಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆಯಬೇಕು. ಕೆರೆಗಳನ್ನು ಸರ್ವೇ ಮಾಡಿಸಿ, ಒತ್ತುವರಿ ತೆರವುಗೊಳಿಸಿ ಅಧಿಕಾರಿಗಳ ಸಮ್ಮುಖದಲ್ಲಿ ಸಂಬಂಧಪಟ್ಟ ಕೆರೆಗಳ ಒಡೆತನದ ಇಲಾಖೆಗಳಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯಬೇಕು. ಬಳಿಕ ಸಂಬಂಧಪಟ್ಟ ಇಲಾಖೆಗಳು ಕೆರೆಗಳ ಸಂರಕ್ಷಣೆ ಪೋಷಣೆ ಮಾಡಬೇಕು. ಮೂಲ ದಾಖಲಾತಿಗಳನ್ನು ಪರಿಶೀಲಿಸಿ ಸರ್ಕಾರಿ ಜಮೀನು, ಆಸ್ತಿಗಳ ಒತ್ತುವರಿ ತೆರವಿಗೂ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಸಾಮಾಜಿಕ ಭದ್ರತಾ ಯೋಜನೆಗಳಡಿ ನೀಡಲಾಗುವ ಪಿಂಚಣಿ ಮಂಜೂರಾತಿ ಪ್ರಕ್ರಿಯೆ ತ್ವರಿತವಾಗಿ ಮಾಡಬೇಕು. ಅರ್ಹರು ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವುದನ್ನು ಕಾಯಬೇಕಿಲ್ಲ. ವಯಸ್ಸಿನ ಅರ್ಹತೆಗೆ ಅನುಗುಣವಾಗಿ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ ತಲುಪಿಸಲು ಅಧಿಕಾರಿಗಳೇ ಮುತುವರ್ಜಿ ವಹಿಸಿ ಫಲಾನುಭವಿಗಳ ಮನೆ ಬಾಗಿಲಿಗೆ ಪಿಂಚಣಿ ಮಂಜೂರಾತಿ ತಲುಪಿಸಬೇಕು. ಅಂಗವಿಕಲರಿಗೂ ಪಿಂಚಣಿ ಸೌಲಭ್ಯ ಸಕಾಲಕ್ಕೆ ದೊರಕಬೇಕು ಎಂದರು.
ಕಾಡಂಚಿನ ಪ್ರದೇಶದಲ್ಲಿ ಕಂಡುಬರುವ ಜನವಸತಿ ಪ್ರದೇಶಗಳಿಗೆ ಮೂಲ ಸೌಕರ್ಯಗಳು ಸಮರ್ಪಕವಾಗಿ ತಲುಪಬೇಕಿದೆ. ರಸ್ತೆ, ಕುಡಿಯುವ ನೀರು, ಆರೋಗ್ಯ, ಶಾಲೆಯಂತಹ ಅಗತ್ಯ ಸೌಲಭ್ಯಗಳಿಗೆ ಕೊರತೆಯಾಗಬಾರದು. ಸಾರಿಗೆ ವ್ಯವಸ್ಥೆಯು ಇರಬೇಕು. ಅರಣ್ಯ ಪ್ರದೇಶದ ಜನರು, ಬುಡಕಟ್ಟು ಸಮುದಾಯಗಳಿಗೆ ವಿಶೇಷ ಗಮನಹರಿಸಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಮಾತನಾಡಿ, ಬುಡಕಟ್ಟು ಜನಾಂಗದವರಲ್ಲಿ ರಕ್ತಹೀನತೆಯನ್ನು ಹೋಗಲಾಡಿಸುವ ಉದ್ದೇಶದಿಂದ ಸೆಪ್ಟೆಂಬರ್ 1ರಿಂದ ವಿಶೇಷ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. ಬುಡಕಟ್ಟು ಸಮುದಾಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಅಧಿಕಾರಿಗಳಿಗೆ ವಿಶೇಷ ಜವಾಬ್ದಾರಿ ನೀಡಲಾಗಿದೆ. ಎಸ್‌ಎಸ್‌ಎಲ್‌ಸಿ ಹಂತದಲ್ಲಿ ಶಾಲೆ ತೊರೆದಿರುವ ಹಾಗೂ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ವಿಶೇಷ ಶಿಬಿರ ಆಯೋಜಿಸಿ ಅವರ ಕಲಿಕಾ ಉತ್ತೇಜನಕ್ಕೆ ಕ್ರಮವಹಿಸಲಾಗುತ್ತಿದೆ ಎಂದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಹಾಸ್ಟೆಲ್‌ಗಳಲ್ಲಿ ಪ್ರವೇಶ ಪಡೆದಿರುವ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಗಮನ ಹರಿಸಬೇಕು. ಇಲಾಖೆಗಳ ವ್ಯಾಪ್ತಿಯ ವಸತಿ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ನಿವೇಶನ ಪಡೆದು ಮುಂದಿನ ಪ್ರಕ್ರಿಯೆ ಕೈಗೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಪೂವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಬಿಆರ್‌ಟಿ ನಿರ್ದೇಶಕಿ ದೀಪಾ ಜೆ. ಕಂಟ್ರಾಕ್ಟರ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್‌ಕುಮಾರ್, ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದರು.