ಜಿಲ್ಲೆ

ಸಕಾಲ ಸೇವೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ

ಚಾಮರಾಜನಗರ: ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳಿಗೆ ಸಿಲುಕದೇ, ನೇರವಾಗಿ ಸರ್ಕಾರಿ ಸೌಲಭ್ಯ ಪಡೆದುಕೊಳ್ಳಲು ಸಕಾಲ ಸೇವೆಗಳು ಸಹಕಾರಿಯಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಸಕಾಲ ಅರಿವು-ಹರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳು ಹಾಗೂ ನಗರ ಪ್ರದೇಶದಲ್ಲಿ ಕರ್ನಾಟಕ ಒನ್, ಸಾರ್ವಜನಿಕ ಸೇವಾ ಕೇಂದ್ರಗಳ ಮೂಲಕ ಸರ್ಕಾರಿ ಸೇವೆಗಳನ್ನು ನಿಗದಿ ಪಡಿಸಿದ ಸಮಯದಲ್ಲಿ ಜನರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ವಸಹಾಯ ಸಂಘಗಳ ಕಾರ್ಯಕರ್ತರು ವಿವಿಧ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಸಂದರ್ಭದಲ್ಲಿ ಸಕಾಲ ಸೇವೆಗಳ ಕುರಿತು ಮಾಹಿತಿ ನೀಡಬೇಕು. ಈ ಮೂಲಕ ಜನರನ್ನು ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಬೇಕು ಎಂದರು.

ಸಾರ್ವನಿಕರು ಸರ್ಕಾರದ ವಿವಿಧ ಸೇವೆಗಳನ್ನು ಪಡೆಯುವಾಗ ಸೂಕ್ತವಾದ ಮಾಹಿತಿ ಇಲ್ಲದೇ ಕಚೇರಿಗೆ ಅಳೆದಾಡುತ್ತಿರುತ್ತಾರೆ. ಆಗಾಗಿ ಅವರಿಗೆ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ತೆರಳಿ ನಿಗದಿ ಪಡಿಸಿದ ವೇಳೆಯಲ್ಲಿ ಸೇವೆಯನ್ನು ಪಡೆದುಕೊಳ್ಳುವಂತೆ ಮಾರ್ಗದರ್ಶನ ನೀಡುವುದು ಕರ್ತವ್ಯವಾಗಿದೆ. ಸಕಾಲದಲ್ಲಿ ಎಷ್ಟು ಸೇವೆಗಳಿವೆ, ಅದಕ್ಕೆ ನಿಗದಿ ಪಡಿಸಿದ ಸಮಯ, ಯಾವ ಸೇವೆಗೆ ಯಾವ ದಾಖಲೆಗಳು ಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳಲು ಇಂತಹ ಕಾರ್ಯಾಗಾರ ಅಗತ್ಯವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸಕಾಲ ಸಂಯೋಜಕಿ ಪವಿತ್ರಾ ಮಾತನಾಡಿ, ಸಾರ್ವಜನಿಕರು ಸರ್ಕಾರಿ ಸೇವೆ ಪಡೆಯಲು ನೇರವಾಗಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರೆ ವಿಳಂಬ ಮಾಡುತ್ತಾರೆ. ಈ ನಡುವೆ ಮಧ್ಯವರ್ತಿಗಳ ಹಾವಳಿ ಇರುತ್ತದೆ. ಈ ಕಾರಣಕ್ಕೆ 2011 ರಲ್ಲಿ ಸರ್ಕಾರ ಸಕಾಲ ಕಾಯ್ದೆಯನ್ನು ಜಾರಿಗೆ ತಂದಿತು. ಸುಮಾರು 100 ಇಲಾಖೆಗಳನ್ನು ಒಂದೇ ಸೂರಿನಡಿ ತಂದು, 1180 ಸೇವೆಗಳನ್ನು ನಿಗದಿತ ಸಮಯದಲ್ಲಿ ಸಾರ್ವಜನಿಕರಿಗೆ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸಕಾಲ ಸೇವೆಗಳ ಬಗ್ಗೆ ಸಂಪೂರ್ಣವಾಗಿ ಅರಿವು ಮೂಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಕಾರ್ಯಾಗಾರದಲ್ಲಿ ಶಿರಸ್ತೇದಾರ ಅನುಷ್, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು, ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳ ಸದಸ್ಯರು ಭಾಗವಹಿಸಿದ್ದರು.