ಜಿಲ್ಲೆ

ಯುವ ಸಮುದಾಯದಲ್ಲಿ ಆತ್ಮಹತ್ಯೆ ಹೆಚ್ಚಳ ಕಳವಳಕಾರಿ

ಎ.ಎಸ್.ಮಣಿಕಂಠ

ಚಾಮರಾಜನಗರ: ರಾಜ್ಯದಲ್ಲಿ ಶೇ.6.2 ರಷ್ಟು ಆತ್ಮಹತ್ಯೆ ಪ್ರಕರಣ ಹೆಚ್ಚಳವಾಗುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯಾಧೀಶ ಎಂ.ಶ್ರೀಧರ್ ಆತಂಕ ವ್ಯಕ್ತಪಡಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಗತ್ತಿನಲ್ಲಿ 40 ಸೆಕೆಂಡ್‌ಗೆ ಒಬ್ಬರಂತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದರಲ್ಲಿ ಪುರುಷರಿಗಿಂತಲೂ ಮಹಿಳೆಯರ ಪ್ರಮಾಣ ಹೆಚ್ಚಾಗಿದೆ. 14-24 ವರ್ಷಗಳ ಅಂತರದ ಯುವ ಸಮುದಾಯ ಹೆಚ್ಚಾಗಿ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಎಲ್ಲರೊಂದಿಗೆ ಗೆಳೆತನ ಬೆಳೆಸುವ ಮೂಲಕ ಮಾನಸಿಕ ಒತ್ತಡ ನಿವಾರಣೆ ಮಾಡಿಕೊಳ್ಳಬಹುದು. ಶಾಲಾ-ಕಾಲೇಜು ಹಂತದಲ್ಲಿ ಈ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳು ಹೆಚ್ಚಾಗಿ ಆಗಬೇಕು ಎಂದು ಸಲಹೆ ನೀಡಿದರು.
ಆತ್ಮಹತ್ಯೆ ಮಾಡಿಕೊಳ್ಳುವುದರಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರ ಬದುಕೂ ಬಹುಮುಖ್ಯವಾಗಿದೆ. ಎಲ್ಲರಿಗೂ ಸಾವು ಬಂದೆ ಬರುತ್ತದೆ, ಆಗಾಗಿ ಆತ್ಮಹತ್ಯೆಯಂತಹ ಆಲೋಚನೆ ಮಾಡಬಾರದು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕು ನೀಡಿದೆ. ಆರ್ಥಿಕತೆ, ನಿರುದ್ಯೋಗ, ಸಾಮಾಜಿಕ ಬಹಿಷ್ಕಾರ, ಮಾದಕ ವಸ್ತುಗಳ ಸೇವನೆ ಹಾಗೂ ಇನ್ನಿತರೆ ಕಾರಣಗಳಿಂದ ಆತ್ಮಹತ್ಯೆಗೆ ಯತ್ನಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.

ದಿನನಿತ್ಯ ಜನರೊಂದಿಗೆ ಬೆರೆಯುವಂತಹ ಶುಶ್ರೂಷಕರು, ಆಶಾ ಕಾರ್ಯಕರ್ತೆಯರು, ವೈದ್ಯರು ಮಾನಸಿಕವಾಗಿ ದುರ್ಬಲಗೊಂಡಿರುವ ವ್ಯಕ್ತಿಗಳಿಗೆ ಸೂಕ್ತ ರೀತಿಯಲ್ಲಿ ಮಾರ್ಗದರ್ಶನ ನೀಡಿದರೆ ಸುಲಭವಾಗಿ ಆತ್ಮಹತ್ಯೆಯನ್ನು ತಡೆಗಟ್ಟಬಹುದು. ಆತ್ಮಹತ್ಯೆ ಒಂದೇ ಎಲ್ಲದಕ್ಕೂ ಪರಿಹಾರವಲ್ಲ ಎಂಬುದನ್ನು ಯುವ ಸಮುದಾಯ ಅರಿತುಕೊಂಡು ಮುನ್ನಡೆಯಬೇಕು, ಘಣತೆಯಿಂದ ಬದುಕು ನಡೆಸಬೇಕು ಎಂದು ತಿಳಿ ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ, ಮನೋರೋಗ ತಜ್ಞ ಡಾ.ಗೋಕುಲ್, ಡಾ.ಅಂಕಪ್ಪ, ಡಾ.ಶ್ರೀನಿವಾಸ್, ಡಾ.ಕೆ.ವಿ.ಮೇರಿ ಅಂಜಲಾ, ಡಾ.ಉಮಾರಾಣಿ, ದೊರೆಸ್ವಾಮಿ ನಾಯಕ್ ಹಾಗೂ ಇತರರು ಉಪಸ್ಥಿತರಿದ್ದರು.

ದೇಶದಲ್ಲಿ 2020-21 ನೇ ಸಾಲಿನಲ್ಲಿ 1,64,033 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ ಹಾಗೂ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹೆಚ್ಚು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ 13,056 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೇ.6.2 ರಷ್ಟು ಆತ್ಮಹತ್ಯೆ ಪ್ರಕರಣ ಹೆಚ್ಚಳವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.-ಡಾ.ಚಂದ್ರಶೇಖರ್, ಕಾರ್ಯಕ್ರಮ ಅಧಿಕಾರಿ, ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆ.