ಚಾಮರಾಜನಗರ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ನನಗೊಂದು ಅವಕಾಶ ಮಾಡಿಕೊಡಿ ಎಂದು ಕಾಂಗ್ರೆಸ್ ಮುಖಂಡ ಡಿ.ಎನ್.ನಟರಾಜ್ ಮನವಿ ಮಾಡಿದರು.
ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಎಸ್ಸಿ ವಿಭಾಗದ ರಾಜ್ಯ ಸಂಚಾಲಕನಾಗಿ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷನಾಗಿ ಪಕ್ಷ ಸಂಘಟನೆಗೆ ಸಾಕಷ್ಟು ಕೆಲಸಮಾಡಿದ್ದೇನೆ. 2013 ಮತ್ತು 2018 ರ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಾಲ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ದೊರೆಯದಿದ್ದರು ಹಿರಿಯರ ಸಲಹೆಯಂತೆ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದೇನೆ. 2024 ರ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂಧ ಸ್ಪರ್ಧಿಸಲು ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹಾಗೂ ಮಾಜಿ ಸಂಸದ ದಿ.ಆರ್.ಧ್ರುವನಾರಾಯಣ್ ಮಾರ್ಗದರ್ಶನದಲ್ಲಿ ಸಾಗುತ್ತಿರುವ ನನ್ನಂತಹ ಸಾಮಾನ್ಯ ಹಾಗೂ ನಿಷ್ಠಾವಂತ ಕಾರ್ಯಕರ್ತನಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು. ಒಂದು ವೇಳೆ ಸಚಿವ ಎಚ್.ಸಿ.ಮಹದೇವಪ್ಪ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದರೆ ನಾನು ಹಿಂದೆ ಸರಿಯುತ್ತೇನೆ. ಅದಲ್ಲದೇ ಅವರ ಪುತ್ರನಿಗೆ ಟಿಕೆಟ್ ನೀಡಿದರೆ ನಾನು ಸಹ ಟಿಕೆಟ್ ಪಡೆಯಲು ಪೈಪೋಟಿ ನಡೆಸುತ್ತೇನೆ. ನಮ್ಮಂತಹ ಸಾಮಾನ್ಯ ಕಾರ್ಯಕರ್ತರನ್ನು ಬೆಳೆಸದೇ ಮತ್ಯಾರನ್ನು ಬೆಳೆಸುತ್ತೀರಿ ಎಂದು ಕಾಂಗ್ರೆಸ್ ಮುಖಂಡರನ್ನು ಪ್ರಶ್ನಿಸಿದರು.
ಗೋಷ್ಠಿಯಲ್ಲಿ ಹನೂರು ಪಟ್ಟಣ ಪಂಚಾಯಿತಿ ಸದಸ್ಯ ಸಂಪತ್ ಕುಮಾರ್, ಎ.ಪಿ.ಸೋಮಣ್ಣ, ರಾಜು ಕಮರವಾಡಿ, ಪ್ರಕಾಶ್‌ಜನ್ನೂರು, ಕಿರಣ್‌ಗಿಡ್ಡು, ಮಾದೇಶ್ ಹಾಜರಿದ್ದರು.