ಜಿಲ್ಲೆ

ಪಠ್ಯೇತರ ಚಟುವಟಿಕೆಗಳ ಕಡೆ ಗಮನಹರಿಸಿ

ಚಾಮರಾಜನಗರ: ನಿರಂತರವಾದ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಎಚ್‌ಐವಿ/ಏಡ್ಸ್ ಖಾಯಿಲೆಯನ್ನು ತಡೆಗಟ್ಟಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾಹುಡೇದಾ ಸಲಹೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಯುವಜನೋತ್ಸವ 2023-24 ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ನಾಟಕ ಸ್ಪರ್ಧೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯಾರೇ ಆದರೂ ರೋಗ ಹರಡುವುದಕ್ಕಿಂತಲೂ ಮುಂಚಿತವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದರೆ, ರೋಗಗಳನ್ನು ತಡೆಗಟ್ಟಬಹುದಾಗಿದೆ. ಎಚ್‌ಐವಿ/ಏಡ್ಸ್ ಹಾಗೂ ಇನ್ನಿತರೆ ಖಾಯಿಲೆಗಳ ಕುರಿತು ಸಾಮಾಜಿಕ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು. ಯಾವುದೇ ವಿಚಾರಗಳನ್ನು ಮುಕ್ತವಾಗಿ ಹಂಚಿಕೊಳ್ಳದೇ ಇದ್ದರೇ ರೋಗಗಳು ಉಲ್ಬಣವಾಗುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದರು.

ಮ್ಯಾರಥಾನ್, ರಸಪ್ರಶ್ನೆ ಸ್ಪರ್ಧೆ, ನಾಟಕ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಈ ಕುರಿತು ಅರಿವು ಮೂಡಿಸುವುದು ಉತ್ತಮ ಕಾರ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಜನರಿಗೂ ಈ ಕುರಿತು ಜಾಗೃತಿ ಮೂಡಿಸಬೇಕು. ಮೊಬೈಲ್ ಬಳಕೆಯಿಂದ ದೂರವಿದ್ದು, ಪುಸ್ತಕಗಳನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಿ. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿವಹಿಸಿ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಎನ್.ನಾಗೇಂದ್ರ ಕುಮಾರ್, ಲೋಕೇಶ್, ಮಹೇಂದ್ರ ಟ್ರ್ಯಾಕ್ಟರ್ ಡೀಲರ್ ಅಶೋಕ್ ಹಾಗೂ ಇತರರು ಉಪಸ್ಥಿತರಿದ್ದರು.

ಯುವಜನತೆಯನ್ನು ಗುರಿಯಾಗಿ ಇಟ್ಟುಕೊಂಡು, ಅವರಲ್ಲಿ ಜಾಗೃತಿ ಮೂಡಿಸಲು ಉದ್ದೇಶದಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ 5183 ಎಚ್‌ಐವಿ/ಏಡ್ಸ್ ಸೋಂಕಿತರಲ್ಲಿ, 1600 ಜನ ಬದುಕುಳಿದಿದ್ದು, 1920 ಜನರು ಮೃತಪಟ್ಟಿದ್ದಾರೆ. ಉಳಿದವರು ವೈದ್ಯಕೀಯ ಪರೀಕ್ಷೆಗಳಿಂದ ದೂರ ಉಳಿದಿದ್ದಾರೆ.-ಡಾ.ರವಿಕುಮಾರ್, ಜಿಲ್ಲಾ ಕ್ಷಯರೋಗ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ, ಚಾಮರಾಜನಗರ.