ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನದ ಮುಂಭಾಗದಲ್ಲಿ ಕರ್ನಾಟಕ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಇಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದರು. ಇಲ್ಲಿ ತಮಿಳುನಾಡು ವಾಹನ ತಡೆದು ಬಾರುಕೋಲು ಚಳವಳಿ ನಡೆಸಿದರು.
ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯ ಸರ್ಕಾರವು ತಮಿಳುನಾಡಿಗೆ ಬಿಟ್ಟಿರುವ ಕಾವೇರಿ ನೀರನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಸ್ವಯಂ ಪ್ರೇರಿತವಾಗಿ ಚಾಮರಾಜನಗರ ಜಿಲ್ಲೆಯನ್ನು ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜಗೋಪಾಲ್, ಚಾ.ರಾ.ಕುಮಾರ್, ಪುರುಷೋತ್ತಮ್, ಮಹೇಶ್‌ಗೌಡ, ಸಾಗರ್, ಆಟೋ ನಾಗೇಶ್, ಸೋಮವಾರಪೇಟೆ ಮಂಜು ಮತ್ತು ಇತರರು ಇದ್ದರು.