ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಗಾಂಧಿ ಜಯಂತಿಯ ಅಂಗವಾಗಿ ಕಣ್ಣು, ಕಿವಿ, ಬಾಯಿ ಮುಚ್ಚಿ ಕನ್ನಡಪರ ಸಂಘಟನೆಗಳ ವತಿಯಿಂದ ಸೋಮವಾರ ಮೌನ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರ ಹಿಡಿದು ಕುಳಿತು ಕಿವಿ, ಕಣ್ಣು, ಬಾಯಿ ಮುಚ್ಚಿ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಅಹಿಂಸೆ ಮೂಲಕ ಮಹಾತ್ಮಗಾಂಧಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅದರಂತೆ, ಗಾಂಧಿ ಜಯಂತಿ ದಿನದಂದು ಜೀವನದಿ ಕಾವೇರಿಗಾಗಿ ನಾವು ಮೌನ ಪ್ರತಿಭಟನೆ ನಡೆಸುತ್ತಿದ್ದೇವೆ. ಕರ್ನಾಟಕಕ್ಕೆ ಕೆಟ್ಟದ್ದಾಗುವುದನ್ನು ನಾವು ನೋಡುವುದಿಲ್ಲ, ಕೇಳುವುದಿಲ್ಲ, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಿ ರಾಜ್ಯದ ಜನರಿಗೆ ಸರ್ಕಾರ ಒಳ್ಳೆಯ ಸಂದೇಶ ಸಾರಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ಗೋಪಾಲ್, ನಿಜಧ್ವನಿಗೋವಿಂದರಾಜು, ಚಾ.ಹ.ರಾಮು, ಬಂಗಾರಸ್ವಾಮಿ, ರಾಮಸಮುದ್ರ ಸುರೇಶ್, ತಾಂಡವಮೂರ್ತಿ ಹಾಗೂ ಇತರರು ಭಾಗವಹಿಸಿದ್ದರು.