ಜಿಲ್ಲೆ

12 ರಂದು ನಕಲಿ ವೈದ್ಯರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜೂ. 12 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಮೂಲಭೂತ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ಮಹೇಶ್ ಹೇಳಿದರು.

ಜಿಲ್ಲೆಯಲ್ಲಿ ವೈದ್ಯರಲ್ಲದ, ಯಾವುದೇ ಅರ್ಹತೆ ಹೊಂದಿಲ್ಲದ ವ್ಯಕ್ತಿಗಳು ಗ್ರಾಮೀಣ ಪ್ರದೇಶಗಳಲ್ಲಿ ಜನರನ್ನು ನಂಬಿಸಿ, ಖಾಸಗಿ ಕ್ಲಿನಿಕ್‌ಗಳನ್ನು ತೆರೆದು ರೋಗಿಗಳಿಗೆ ಔಷಧ ನೀಡುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಸರ್ಕಾರಿ ಆಸ್ಪತ್ರೆಯ ವೈದ್ಯರು ಖಾಸಗಿ ಆಸ್ಪತ್ರೆಯಲ್ಲೂ ಕೆಲಸ ಮಾಡುತ್ತಾರೆ. ಸಾಮಾನ್ಯ ಜನರಿಂದ ಹಣ ವಸೂಲಿ ಮಾಡುತ್ತಾರೆ. ತಾಲೂಕು ವೈದ್ಯಾಧಿಕಾರಿಗಳು, ಜಿಲ್ಲಾ ಅರೋಗ್ಯ ವೈದ್ಯಾಧಿಕಾರಿ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ದೂರಿದರು.

ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿಶ್ವೇಶ್ವರಯ್ಯ ಅವರಿಗೆ ದೂರು ನೀಡಿದರೂ ಏನು ಪ್ರಯೋಜನವಾಗಿಲ್ಲ. ಆದ್ದರಿಂದ ಇವರನ್ನು ವಜಾಗೊಳಿಸಿ, ಪ್ರಾಮಾಣಿಕ ಅಧಿಕಾರಿಗಳನ್ನು ನೇಮಕ ಮಾಡಬೇಕು. ಸಮಿತಿಯು ನಿರಂತರವಾಗಿ ಹೋರಾಟ ಮಾಡಲಿದ್ದು, ನಂತರದ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು. ಗೋಷ್ಠಿಯಲ್ಲಿ ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯ ರಾಜ್ಯ ಉಪಾಧ್ಯಕ್ಷ ಶ್ರೀಕಂಠಪ್ಪ, ಪ್ರಧಾನ ಕಾರ್ಯದರ್ಶಿ ಎಸ್. ಸತೀಶ್ ಕುಮಾರ್, ಗೌರವಾಧ್ಯಕ್ಷ ಗುರುಸ್ವಾಮಪ್ಪ ಹಾಜರಿದ್ದರು.