ಜಿಲ್ಲೆ

ಮತದಾರರ ಪಟ್ಟಿ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಹಕ್ಕು ಆಕ್ಷೇಪಣೆ ಸಲ್ಲಿಸಲು ದಿನಾಂಕ ನಿಗದಿಪಡಿಸಿ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವ ಸಂಬಂಧ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಗುರುವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವ ಸಂಬಂಧ ಕರಡು ಮತದಾರರ ಪಟ್ಟಿಯನ್ನು ಆಯಾ ತಾಲೂಕುಗಳ ಮತಗಟ್ಟೆಗಳಲ್ಲಿ ಸ್ಥಾಪಿಸಲಾಗಿದೆ. ಈ ಸಂಬಂಧ ಆಯಾ ತಾಲೂಕು ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.9ರವರೆಗೆ ಅವಕಾಶ ನೀಡಲಾಗಿದೆ. ನಿಗದಿಪಡಿಸಿದ ದಿನಾಂಕದವರೆಗೆ ಸ್ವೀಕರಿಸಲಾಗುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ನಿಯಾಮಾನುಸಾರ ಪರಿಶೀಲಿಸಿ ಡಿ.30ರಂದು ಅಂತಿಮ ಮತರದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಚಾಮರಾಜನಗರ ತಾಲೂಕಿನಲ್ಲಿ 537, ಗುಂಡ್ಲುಪೇಟೆ 404, ಯಳಂದೂರು 170, ಕೊಳ್ಳೇಗಾಲ 730 ಹಾಗೂ ಹನೂರು ತಾಲೂಕಿನಲ್ಲಿ 243 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 2,084 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 1,812 ಅರ್ಜಿಗಳನ್ನು ಅಂಗೀಕರಿಸಲಾಗಿದ್ದು, 55 ಅರ್ಜಿಗಳು ತಿರಸ್ಕೃತಗೊಂಡಿವೆ. ಅಲ್ಲದೆ 217 ಅರ್ಜಿಗಳನ್ನು ಸಂಬಂಧಪಟ್ಟ ಇತರ ಜಿಲ್ಲೆ, ತಾಲೂಕಿಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಚುನಾವಣಾ ತಹಸೀಲ್ದಾರ್ ಅಶೋಕ್, ಶಿರಸ್ತೇದಾರ್ ಎಸ್. ಬಸವರಾಜು, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎ.ಎಚ್. ನಸ್ರುಲ್ಲಾ ಖಾನ್, ಎಸ್. ಬಾಲಸುಬ್ರಮಣ್ಯ, ಎನ್. ನಾಗಯ್ಯ, ಎಸ್. ಮಹೇಶ್‌ಗೌಡ, ಕೆ. ಹರೀಶ್ ಮತ್ತು ಇತರರು ಉಪಸ್ಥಿತರಿದ್ದರು.